ಕಲಬುರಗಿ: ಮಕ್ಕಳ ಮೇಲೆ ಹಲ್ಲೆ ಮತ್ತು ದೌರ್ಜನ್ಯದಂತಹ ಘಟನೆಗಳು ನಡೆಯುತ್ತಲೇ ಇದ್ದು, ಕೆಲವು ಕಡೆಗಳಲ್ಲಿ ಅಧಿಕಾರಿಗಳ ಮೂಗಿನ ನೇರಕ್ಕೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ವೈ. ಮರಿಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಮಕ್ಕಳ ರಕ್ಷಣಾ ವ್ಯವಸ್ಥೆ ಬಲಪಡಿಸುವ ಕುರಿತ ಮಾಹಿತಿ ಮತ್ತು ಕ್ರಿಯಾಯೋಜನೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಹೈದ್ರಾಬಾದ-ಕರ್ನಾಟಕದಲ್ಲಿ ಮಕ್ಕಳಲ್ಲಿ ಅಪೌಷ್ಟಿಕತೆ, ಬಾಲ ಕಾರ್ಮಿಕ ಪದ್ಧತಿ, ದೇವದಾಸಿ ಪದ್ಧತಿ, ಬಾಲ್ಯ ವಿವಾಹ ಪದ್ಧತಿ ಮತ್ತು ಅಲೆಮಾರಿ ಮಕ್ಕಳ ಸಮಸ್ಯೆ ಗಂಭೀರವಾಗಿದೆ. ಕಳೆದ ಎರಡೂಮೂರು ವರ್ಷಗಳಲ್ಲಿ ಸುಮಾರು 300 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿದ್ದು ಶ್ಲಾಘನೀಯವಾಗಿದೆ. ಬಾಲ್ಯ ವಿವಾಹ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಬೇರು ಬಿಟ್ಟಿರುವ ದೇವದಾಸಿ ಮತ್ತು ಬಾಲ್ಯ ವಿವಾಹ ಪದ್ಧತಿಯನ್ನು ನಿಯಂತ್ರಿಸಲು ನಿರಂತರವಾಗಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್. ಮಾಣಿಕ್ಯ ಮಾತನಾಡಿ, ಬಾಲ್ಯ ವಿವಾಹ ಪದ್ಧತಿಯಿಂದ 18 ವರ್ಷದೊಳಗಿನ ಹೆಣ್ಣು ಮಕ್ಕಳು ಗರ್ಭಿಣಿ ಮತ್ತು ತಾಯಿಯಂದಿರುವ ಬೆಳವಣಿಗೆ ಮತ್ತು ಪ್ರವೃತ್ತಿ ಅತಿ ಭಯಂಕರವಾಗಿದೆ. ಸಾಮಾಜಿಕ ಜವಾಬ್ದಾರಿಯಿಂದ ಮಾತ್ರ ಇಂತಹ ಅನಿಷ್ಟಗಳನ್ನು ತಡೆಯಲು ಸಾಧ್ಯವಿದೆ ಎಂದು ಹೇಳಿದರು.
ಇದೇ ವೇಳೆ ಮಕ್ಕಳ ಹಕ್ಕುಗಳ ರಕ್ಷಣೆಗೆ ಕುರಿತ ಪುಸ್ತಕವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ವೈ. ಮರಿಸ್ವಾಮಿ ಬಿಡುಗಡೆಗೊಳಿಸಿದರು. ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ| ರಾಜಾ ಪಿ., ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೀನಾ ರಶ್ನಿ ಡಿಸೋಜಾ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಚಂದ್ರಶೇಖರ ಅಲ್ಲಿಪೂರ ಮಾತನಾಡಿದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಕೊಳ್ಳಾ ಅಧ್ಯಕ್ಷತೆ ವಹಿಸಿದ್ದರು.
ಕೊಪ್ಪಳ ಜಿಲ್ಲಾ ಸಂರಕ್ಷಣಾ ಯೋಜನೆ ಸಂಯೋಜಕ ರಾಘವೇಂದ್ರ ಭಟ್, ಡಾನ್ ಬೋಸ್ಕೋ ಜಿಲ್ಲಾಧ್ಯಕ್ಷ ಫಾದರ್ ಸಜೀ ಜಾರ್ಜ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭೀಮರಾಯ ಕಣ್ಣೂರ, ಎಎಸ್‌ಪಿ ಲೋಕೇಶ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯುವುದು ಅಷ್ಟೇ ಅಲ್ಲ. ತದನಂತರ ಏನಾಗುತ್ತಿದೆ ಎಂದು ತಿಳಿಯಲು ಸತ್ಯ ಪರಿಶೀಲನಾ ಕಾರ್ಯವಾಗಬೇಕಿದೆ. ಮಕ್ಕಳ ಮೇಲೆ ಚಲನಚಿತ್ರಗಳು ಕೆಟ್ಟ ಪರಿಣಾಮ ಬೀರುತ್ತಿವೆ. ಹೀಗಾಗಿ ಚಿತ್ರ ಬಿಡುಗಡೆ ಮುನ್ನ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೆನ್ಸಾರ್ ಮಂಡಳಿ ಮೂಲಕ ಮಕ್ಕಳ ಮೇಲೆ ಪರಿಣಾಮ ಬೀರುವ ದೃಶ್ಯಗಳಿಗೆ ಕತ್ತರಿ ಹಾಕಿಸುವ ನಿಟ್ಟಿನಲ್ಲಿ ಚಿಂತಿಸಲಿ.
ಎನ್.ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ