Advertisement

ಬೆಂಕಿ ಬೀಳದಂತೆ ಮುನ್ನೆಚ್ಚರವಹಿಸಿ

07:47 AM Mar 03, 2019 | Team Udayavani |

ಚಾಮರಾಜನಗರ: ಬೇಸಿಗೆ ವೇಳೆ ಹೆಚ್ಚು ಅರಣ್ಯ ಸಿಬ್ಬಂದಿ ನಿಯೋಜಿಸಿ, ಅರಣ್ಯದಲ್ಲಿ ಬೆಂಕಿ ಅನಾಹುತಗಳು ಸಂಭವಿಸದಂತೆ ನೋಡಿಕೊಳ್ಳಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ  ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

Advertisement

ಬಂಡೀಪುರ ಹುಲಿ ರಕ್ಷಿತ ಅರಣ್ಯದಲ್ಲಿ ಬೃಹತ್‌ ಪ್ರಮಾಣದ ಕಾಡ್ಗಿಚ್ಚು ಸಂಭವಿಸಿದೆ. ಇನ್ನೂ ಹಲವೆಡೆ ಬೇಸಿಗೆ ಸಂದರ್ಭದಲ್ಲಿ ಅಗ್ನಿ ಅನಾಹುತ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಬೇಸಿಗೆ ವೇಳೆ ಯಾವುದೇ ಅವಘಡಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬೆಂಕಿ ತೀವ್ರವಾಗಿ ಹರಡದಂತೆ ಸಾಕಷ್ಟು ಪೂರ್ವ ಕ್ರಮಗಳಿಗೆ ಸಿದ್ಧತೆ ಮಾಡಿಕೊಂಡಿರಬೇಕು ಎಂದರು. 

ವಿಶೇಷ ಗಮನ: ಅರಣ್ಯ ಪ್ರದೇಶದಲ್ಲಿ ಇರುವ ಕೆರೆ, ಇತರೆ ನೀರಿನ ಮೂಲಗಳ ಸಮರ್ಪಕ ನಿರ್ವಹಣೆ ಮಾಡಬೇಕು. ಪ್ರಾಣಿಪಕ್ಷಿಗಳಿಗೆ ನೀರು ಲಭ್ಯ ಆಗಬೇಕು. ನೀರಿನ ಸೌಕರ್ಯಗಳಿಗೆ ವಿಶೇಷ ಗಮನ ನೀಡಬೇಕೆಂದು ತಾಕೀತು ಮಾಡಿದರು.

ಮೇವು ಕಿಟ್‌: ಜಿಲ್ಲೆಯಲ್ಲಿ ಮೇವು ದಾಸ್ತಾನು ಮಾಡಬೇಕು. ಈಗಾಗಲೇ ಮೇವು ಕಿಟ್‌ ಅನ್ನು ಎಷ್ಟು ಪ್ರಮಾಣದಲ್ಲಿ ವಿತರಿಸಲಾಗಿದೆ. ಎಷ್ಟು ಪ್ರಮಾಣದಲ್ಲಿ ಬೆಳೆಯಲಾಗಿದೆ ಎಂಬ ಬಗ್ಗೆ ವರದಿ ನೀಡುವಂತೆ ಪಶುಸಂಗೋಪನೆ ಉಪನಿರ್ದೇಶಕರಿಗೆ ಸೂಚಿಸಿದರು.

ಫೋಟೋದೊಂದಿಗೆ ವರದಿ: ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮಾತನಾಡಿ, ಮೇವು ಕಿಟ್‌ ವಿತರಣೆ ಹಾಗೂ ಮೇವು ಬೆಳೆದ ಕುರಿತು ಸಮಗ್ರವಾಗಿ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಸಬೇಕು. ಮುಂದೆ ಜಿಲ್ಲೆಯ ಯಾವ ಯಾವ ಭಾಗಗಳಲ್ಲಿ ಮೇವು ಕಿಟ್‌ ವಿತರಣೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡುವಂತೆ ತಿಳಿಸಿದರು. 

Advertisement

ಕೃಷಿ ಇಲಾಖೆ ಕೈಗೊಂಡಿರುವ ಇಲಾಖೆ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದ ಸಚಿವರು, ಬಾಕಿ ಇರುವ ಬೆಳೆ ವಿಮೆ ಪರಿಹಾರ ವಿತರಣೆಗೆ ಕ್ರಮ ವಹಿಸಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೆರವು ಇಲಾಖೆ ವತಿಯಿಂದ ನೀಡಬೇಕೆಂದು ತಿಳಿಸಿದರು. 

ಕಾಮಗಾರಿ ಪೂರ್ಣಗೊಳಿಸಿ: ಚಾಮರಾಜನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಚಾಮರಾಜನಗರದಲ್ಲಿ ಅಪೂರ್ಣಗೊಂಡಿರುವ ಕಡೆ ರಸ್ತೆ ಕೆಲಸ ಶೀಘ್ರವಾಗಿ ಪೂರೈಸಬೇಕು. ನಗರಸಭೆ ಅಧಿಕಾರಿಗಳು, ಹೆದ್ದಾರಿ ಇಲಾಖೆ ಅಧಿಕಾರಿಗಳು ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಉಸ್ತುವಾರಿ ಸಚಿವರು ಸೂಚಿಸಿದರು. 

ಕುಡಿವ ನೀರು: ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು. ಸಮಸ್ಯೆ ಇರುವ ಪ್ರದೇಶಗಳಿಗೆ ಆದ್ಯತೆ ಮೇರೆಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಸಣ್ಣ ನೀರಾವರಿ ಇಲಾಖೆ, ಕಾವೇರಿ ನೀರಾವರಿ ನಿಗಮದ ವತಿಯಿಂದ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿ ಸಹ ತ್ವರಿತವಾಗಿ ಪೂರ್ಣಗೊಳಿಸಬೇಕೆಂದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕೊಳಚೆ ನಿರ್ಮೂಲನಾ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಲೋಕೋಪಯೋಗಿ ಇಲಾಖೆ, ಸಾಮಾಜಿಕ ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಲಾಯಿತು. ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next