ಬೆಂಗಳೂರು: ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಕನ್ನಡದಲ್ಲಿಯೇ ದರಪಟ್ಟಿ ಪ್ರಕಟಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಕಟಿಸಿದ್ದು, ಬುಧವಾರವೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕನ್ನಡ ನಾಮಫಲಕ ಹೋರಾಟ ತೀವ್ರಗೊಂಡಿರುವುದರ ಮಧ್ಯೆಯೇ ಕೇಂದ್ರ ಸರ್ಕಾರ ಈ ನಿರ್ಧಾರ ಪ್ರಕಟಿಸಿದ್ದು, ಸ್ಥಳೀಯ ಭಾಷೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡಲಿದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ದರಪಟ್ಟಿ ಇಂಗ್ಲಿಷ್‌ನಲ್ಲಿ ಮಾತ್ರ ಇರುತ್ತವೆ. ಕನ್ನಡದಲ್ಲಿಯೂ ಇರಬೇಕೆಂಬ ಮನವಿಗಳು ಬಂದಿದ್ದು, ತಕ್ಷಣವೇ ಕ್ರಮಕೈಗೊಳ್ಳಲು ತೈಲ ಕಂಪನಿಗಳಿಗೆ ಸೂಚಿಸಲಾಗಿದೆ ಎಂದರು.
ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಸಲು ಸೂಚಿಸಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವ ಸಂದರ್ಭದಲ್ಲಿ ಕೇಂದ್ರದ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.
ಇಳಿಕೆಗೆ ನಕಾರ : ಚುನಾವಣೆ ಸಮೀಪಿಸುತ್ತಿರುವ ಕಾರಣ ಡೀಸೆಲ್, ಪೆಟ್ರೋಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಯೋಚಿಸುತ್ತಿದೆಯೆ ಎಂಬ ಪ್ರಶ್ನೆಗೆ ನೇರವಾಗಿ ಉತ್ತರಿಸಲು ನಿರಾಕರಿಸಿದ ಅವರು, ವಿಶ್ವದ ಎಲ್ಲ ದೇಶಗಳಲ್ಲಿ ಡೀಸೆಲ್, ಪೆಟ್ರೋಲ್ ದರ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ ಎರಡು ವರ್ಷಗಳಿಂದ ಕಡಿಮೆಯಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸುಂಕವನ್ನು ಮೋದಿಯವರು ಎರಡು ಬಾರಿ ಇಳಿಸಿದ್ದಾರೆ. ಮೇ ವೇಳೆಗೆ 45 ಸಾವಿರ ಬ್ಯಾರೆಲ್ ಕಚ್ಚಾ ತೈಲ ಉತ್ಪಾದನೆಗೆ ದೇಶ ಮುಂದಾಗಿದೆ ಎಂದರು.