ಮಂಗಳೂರು/ಉಡುಪಿ: ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಜು. 9ರಂದು ಉಭಯ ಜಿಲ್ಲಾ ಪ್ರಾಥಮಿಕ ಶಿಕ್ಷಕರು ಸಾಮೂಹಿಕ ಸಾಂದರ್ಭಿಕ ರಜೆ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ.
ಮಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಶಿವಶಂಕರ ಭಟ್ ಕೆ. ಮತ್ತು ಉಡುಪಿಯಲ್ಲಿ ಸಂಘದ ಜಿಲ್ಲಾ ಶಾಖಾಧ್ಯಕ್ಷ ರವೀಂದ್ರ ಹೆಗ್ಡೆ ಮತ್ತು ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ಬಿ.ಬಿ. ಈ ಬಗ್ಗೆ ಮಾಹಿತಿ ನೀಡಿದರು.
ಮಂಗಳೂರಿನಲ್ಲಿ ಬೆಳಗ್ಗೆ 10.30ಕ್ಕೆ ಬಾವುಟಗುಡ್ಡೆಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್ಯಾಲಿ ನಡೆಯಲಿದೆ. ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣ ದಲ್ಲಿ ಬೆಳಗ್ಗೆ 10.30ರಿಂದ ಅಪರಾಹ್ನ ವರೆಗೆ ಪ್ರತಿಭಟನೆ ನಡೆಯಲಿದೆ.
ಬೇಡಿಕೆಗಳನ್ನು ಜೂ. 30ರ ಒಳಗೆಈಡೇರಿಸದಿದ್ದರೆ ಹೋರಾಟ ನಡೆಸುವುದಾಗಿ ನಿರ್ಣಯಿಸಲಾಗಿತ್ತು. ಪ್ರಾಥಮಿಕ ಶಾಲೆಗಳಲ್ಲಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ರನ್ನು ಪದವೀಧರ ಶಿಕ್ಷಕರು ಎಂದು ಪರಿಗಣಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಮಂದುವರಿಸಬೇಕು, ಶಿಕ್ಷಕರ ವರ್ಗಾಣೆ ಪ್ರಕ್ರಿಯೆ ಮುಗಿದ ತತ್‌ಕ್ಷಣ ಅಕ್ಟೋಬರ್‌ನಲ್ಲಿ ಮತ್ತೂಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸಬೇಕು. ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು ಮೊದಲಾದ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಲಾಗಿದೆ.