ಬೆಂಗಳೂರು: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಒಡಿಶಾ ರಾಜ್ಯದ ಸಂಬಲ್ಪುರ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ ಪ್ರಕರಣ ಇದೀಗ ರಾಜ್ಯದ ಹೈಕೋರ್ಟ್ ಅಂಗಳಕ್ಕೆ ಬಂದಿದೆ.
ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದ ಮೊಹಮ್ಮದ್ ಮೊಹ್ಸಿನ್ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ಕೇಂದ್ರ ಚುನಾವಣಾ ಆಯೋಗ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.
ಮೊಹ್ಸಿನ್ ವಿರುದ್ಧ ಶಿಸ್ತು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸಿನ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಏ.29ರಂದು ಸಿಎಟಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದೆ.
ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ಹಾಗೂ ನ್ಯಾ. ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ, ಮೊಹಮ್ಮದ್ ಮೊಹ್ಸಿನ್, ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿ ವಿಚಾರಣೆ ಮುಂದೂಡಿತು.
ಅರ್ಜಿಯಲ್ಲೇನಿದೆ?: ಸಿಎಟಿ ನೀಡಿರುವ ಆದೇಶ ಕಾನೂನಿಗೆ ವಿರುದ್ಧವಾಗಿದೆ. ನ್ಯಾಯಾಧಿಕರಣ ತನ್ನ ವ್ಯಾಪ್ತಿ ಮೀರಿ ಈ ಆದೇಶ ನೀಡಿದೆ. ಸಂಬಲ್ಪುರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್, ಚುನಾವಣಾ ಆಯೋಗದ ಸೂಚನೆಗಳನ್ನು ಉಲ್ಲಂಘಿಸಿ ಎಸ್‌ಪಿಜಿ ಭದ್ರತೆ ಹೊಂದಿದ್ದ ಪ್ರಧಾನ ಮಂತ್ರಿಗಳ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದಾರೆ. ಹೀಗಾಗಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸವ ಅಗತ್ಯವಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಚುನಾವಣೆ ಹಂತದಲ್ಲಿ ಮೊಹ್ಸಿನ್ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಯಥಾಸ್ಥಿತಿಗೆ ಆದೇಶಿಸಿರುವುದು ಸೂಕ್ತವಲ್ಲ. ಇದರಿಂದ ದೇಶಾದ್ಯಂತರ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಇತರ ಅಧಿಕಾರಿಗಳೂ ಚುನಾವಣಾ ಆಯೋಗದ ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸದಿರುವ ಸಾಧ್ಯತೆ ಇದೆ. ಹೀಗಾಗಿ ಸಿಎಟಿ ಆದೇಶ ರದ್ದುಪಡಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.