ಯಲಹಂಕ: ಗ್ರಾಮ ಪಂಚಾಯಿತಿಗಳು ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿರುವ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಸಚಿವ ನರೇಂದ್ರಸಿಂಗ್ ತೋಮರ್ ಅಭಿಪ್ರಾಯಪಟ್ಟರು.
ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ದೊಡ್ಡಜಾಲ ಗ್ರಾಮ ಪಂಚಾಯಿತಿಗೆ ಗಾಂಧಿ ಪುರಸ್ಕಾರ ದೊರೆತಿರುವ ಹಿನ್ನೆಲೆಯಲ್ಲಿ ತಮ್ಮ ಇಲಾಖೆಯ 15 ಸದಸ್ಯರ ತಂಡದೊಂದಿಗೆ ದೊಡ್ಡಜಾಲಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅವಲೋಕಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಗ್ರಾಮ ಪಂಚಾಯಿತಿ ಬಗ್ಗೆ ಸಾಕಷ್ಟು ಕುತೂಹಲವಿದೆ. ಹಾಗಾಗಿ ಪಂಚಾಯಿತಿಯ ಕುರಿತಂತೆ ಸಂಪೂರ್ಣ ವರದಿ ಸಿದ್ಧಪಡಿಸಿಲು ಸೂಚಿಸಿದ್ದಾರೆ. ಈ ಗ್ರಾಮ ಪಂಚಾಯಿತಿ ಕಾರ್ಯಕ್ರಮಗಳನ್ನು ಇತರೆ ಪಂಚಾಯಿತಿಗಳಿಗೂ ವಿಸ್ತರಿಸಲು ಆಶಿಸಿದ್ದಾರೆ ಎಂದು ತಿಳಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಶೇ.100ರಷ್ಟು ಜನರಿಗೆ ತಲುಪಿಸುವಲ್ಲಿ ದೊಡ್ಡಜಾಲ ಪಂಚಾಯತಿ ಕಾರ್ಯ ಮಾದರಿಯಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇನ್ನಷ್ಟು ಉತ್ಸಾಹದಿಂದ ಕಾರ್ಯನಿರ್ವಹಿಸಲು ಇಂಥ ಕಾರ್ಯಗಳು ಪ್ರೇರೇಪಣೆಯಾಗಿವೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಕೆ. ಮಹೇಶ್ ಕುಮರ್ ಮಾತನಾಡಿ, ಚಿಕ್ಕನಹಳ್ಳಿ ಗ್ರಾಮದಲ್ಲಿ ಚರಂಡಿ ನೀರು ಬಿಡದೆ ಇಂಗುಗುಂಡಿಗೆ ನೀರು ಹರಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಅಂತರ್ಜಲ ಹೆಚ್ಚಾಗುವ ಜತೆಗೆ ಸೊಳ್ಳೆಗಳ ಕಾಟ ತಪ್ಪಿದೆ. ಇದೇ ವೇಳೆ ಸೋಲಾರ್ ಗ್ರೀಡ್ ಮೂಲಕ ವಿದ್ಯುತ್ ಬೀದಿ ದೀಪ ಅಳವಡಿಸಿ ಕತ್ತಲೆ ಮುಕ್ತ ಗ್ರಾಮವನ್ನಾಗಿ ಪರಿವರ್ತಿಸಲಾಗಿದೆ ಎಂದು ತಿಳಿಸಿದರು.
ಪಿಡಿಒ ಗಂಗಾರಾಮ್ ಮಾತನಾಡಿ, ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು, ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದೆ. ಇದೀಗ ಕೇಂದ್ರ ಸಚಿವರ ನಿಯೋಗ ಗ್ರಾಮಕ್ಕೆ ಭೇಟಿ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಲು ಪ್ರೇರೇಪಣೆ ದೊರೆತಿದೆ ಎಂದು ಹೇಳಿದರು.