ಬೆಂಗಳೂರು: ಕೇವಲ ತಿಂಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಫೆ.6ರಂದು ರಾಜ್ಯ ರಾಜಧಾನಿ ಬೆಂಗಳೂರು ಮತ್ತು ತುಮಕೂರಿಗೆ ಆಗಮಿಸಲಿದ್ದಾರೆ.
ಅಂದು ಇಡೀ ದಿನ ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (ಬಿಐಇಸಿ) ಮತ್ತು ತುಮಕೂರಿನ ಗುಬ್ಬಿ, ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಆಯೋಜಿಸಲಾದ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಮಂತ್ರಿಗಳು ಭಾಗವಹಿಸಲಿದ್ದಾರೆ.
ಬಿಐಇಸಿಯಲ್ಲಿ ಫೆ. 6ರಿಂದ 8ರವರೆಗೆ “ಇಂಡಿಯಾ ಎನರ್ಜಿ ವೀಕ್’ ನಡೆಯಲಿದೆ. ಇದಕ್ಕೆ ಪ್ರಧಾನಿ ಮೋದಿ ಬೆಳಿಗ್ಗೆ ಚಾಲನೆ ನೀಡಲಿದ್ದಾರೆ. ಅಲ್ಲಿಂದ ಗುಬ್ಬಿ ತಾಲೂಕಿನ ಬಿದರಹಳ್ಳಿ ಕಾವಲ್‌ನಲ್ಲಿ ಮಧ್ಯಾಹ್ನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ., (ಎಚ್‌ಎಎಲ್) ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆಯನ್ನು ದೇಶಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲಿಂದ ತಿಪಟೂರಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ತಿಂಗಳ ಅಂತರದಲ್ಲಿ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಭೇಟಿ ಇದಾಗಿದೆ. ಜ. 12ರಂದು ಹುಬ್ಬಳ್ಳಿಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಯಲ್ಲಿ ಅವರು ಪಾಲ್ಗೊಂಡಿದ್ದರು.