ಬೆಂಗಳೂರು: ತೆಲಂಗಾಣ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ.25 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಎಚ್‌ಎಎಲ್‌ನ ಕಾರ್ಯಕ್ರಮ ವೊಂದರಲ್ಲಿ ಪಾಲ್ಗೊಂಡು ತೆಲಂಗಾಣಕ್ಕೆ ತೆರಳಲಿದ್ದಾರೆ.
ಚಂದ್ರಯಾನ-3 ಯಶಸ್ಸಿನ ಸಂದರ್ಭದಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು 3 ತಿಂಗಳ ನಂತರ ಮತ್ತೆ ಬೆಂಗಳೂರಿಗೆ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲನೆ, ಭದ್ರತಾ ವ್ಯವಸ್ಥೆಗಳ ಕುರಿತಂತೆ ರಾಜ್ಯ ಮಟ್ಟದ ಅಧಿಕಾರಿಗಳು ಬುಧವಾರ ಬೆಂಗಳೂರಿನಲ್ಲಿ ಸಭೆ ನಡೆಸಿದರು.
ನ.25ರ ಶನಿವಾರ ಬೆಳಗ್ಗೆ 9 ಗಂಟೆ ವೇಳೆಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಇಳಿಯಲಿರುವ ಪ್ರಧಾನಿ ಮೋದಿ ಅವರ ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ವಿಮಾನ ನಿಲ್ದಾಣದಿಂದ ನೇರವಾಗಿ ಎಚ್‌ಎಎಲ್‌ಗೆ ತೆರಳಲಿರುವ ಪಿಎಂ, ಅಲ್ಲಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮದ ತರುವಾಯ ತೆಲಂಗಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
ಅಲ್ಲಿ ಪ್ರಚಾರ ಸಭೆ ಹಾಗೂ ರ್ಯಾಲಿಯಲ್ಲಿ ಭಾಗವಹಿಸಿ, ದೆಹಲಿಗೆ ಹಿಂದಿರುಗಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮಂಗಳವಾರಷ್ಟೇ ಕಣ್ಣಿನ (ಕ್ಯಾಟ್ರಾಕ್ಟ್) ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ವಿಶ್ರಾಂತಿ ಪಡೆಯುತ್ತಿರುವುದರಿಂದ ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಳ್ಳುವುದಕ್ಕಾಗಲೀ, ಬೀಳ್ಕೊಡುವುದಕ್ಕಾಗಲೀ ತೆರಳುವುದಿಲ್ಲ ಎಂದು ಮೂಲಗಳು ಹೇಳಿವೆ.