ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಸಭೆಯ ನಂತರ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿಗಳ ಭೇಟಿ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಿ. ಯಾವುದೇ ರೀತಿಯ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು. ಯೋಗ ದಿನಾಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದ ಅವರು, ಪ್ರಧಾನಿಗಳ ಎರಡು ದಿನಗಳ ಸಿದ್ಧತೆಗಳ ಕುರಿತು ವಿವರವಾಗಿ ಚರ್ಚಿಸಿದರು.
ಇದನ್ನೂ ಓದಿ : ಪೊಲೀಸರ ಭರ್ಜರಿ ಕಾರ್ಯಾಚರಣೆ : 23 ಆರೋಪಿಗಳ ಬಂಧನ, 1ಕೋಟಿಗೂ ಅಧಿಕ ಮೌಲ್ಯದ ಸೊತ್ತು ವಶ
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಶ್ಮಿ ಮಹೇಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.