ಬೆಂಗಳೂರು: ಸಿದ್ಧಗಂಗಾ ಮಠದ ಶಿವ ಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಹಾಗೂ ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿಯವರ ಹುಟ್ಟೂರು ಬಾನಂದೂರು ಗ್ರಾಮದಲ್ಲಿ ಉದ್ದೇಶಿತ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರ ಸ್ಥಾಪನೆ ಯೋಜನೆಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರು.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸ್ವಾಮೀಜಿಗಳ ಹುಟ್ಟೂರಿನಲ್ಲಿ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರ ಸ್ಥಾಪನೆಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಒಟ್ಟಿಗೆ ಎಲ್ಲ ಕಾಮಗಾರಿ ಕೈಗೊಳ್ಳುವ ಬದಲು ಹಂತ ಹಂತವಾಗಿ ಕೈಗೊಂಡರೆ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಲಿದೆ ಎಂದರು.
ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಯಡಿಯೂರಪ್ಪ, ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದಟಛಿವಾಗಿವೆ. ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸಚಿವ ಸಿ.ಟಿ. ರವಿ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್. ಎನ್. ಪ್ರಸಾದ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
4 ಕಡೆ ಕ್ರೀಡಾಂಗಣ ನಿರ್ಮಾಣ ರದ್ದು: ನಗರದ ನಾಲ್ಕು ಕಡೆ ಕ್ರೀಡಾಂಗಣ ನಿರ್ಮಾಣ ಹಾಗೂ ಕೆಲವೆಡೆ ರಂಗ ಮಂದಿರ ನಿರ್ಮಾಣ ಪ್ರಸ್ತಾವ ಕೈಬಿಡಬೇಕು ಎಂದು ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ನಗರದಲ್ಲಿ ಈಗಾಗಲೇ ನಿರ್ಮಿಸಿರುವ ಕ್ರೀಡಾಂಗಣಗಳನ್ನು ಎಷ್ಟರ ಮಟ್ಟಿಗೆ ಬಳಸಲಾಗುತ್ತಿದೆ ಎಂಬುದು ಗೊತ್ತಿದೆ. ತೆರೆದ ಪ್ರದೇಶವಿದ್ದರೆ ಸ್ಥಳೀಯರೇ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.
ಹಾಗಾಗಿ ನಗರದ ನಾಲ್ಕು ಕಡೆ ಕ್ರೀಡಾಂಗಣ ನಿರ್ಮಾಣ ಅಗತ್ಯವಿಲ್ಲ. ಅಗತ್ಯವಿರುವ ಕಡೆ ಪ್ರವಾಸಿಗರನ್ನು ಆಕರ್ಷಿಸುವ ರೀತಿಯಲ್ಲಿ ಪಿಪಿಪಿ ಮಾದರಿಯಡಿ “ಯಾತ್ರಿ ನಿವಾಸ್’ ಕಟ್ಟಡ ನಿರ್ಮಿಸುವತ್ತ ಗಮನ ಹರಿಸಿ. ಚಿತ್ರನಗರಿ ನಿರ್ಮಾಣಕ್ಕಾಗಿ ಬೆಂಗಳೂರಿನ ಹೊರ ಭಾಗದಲ್ಲಿ 100 ಎಕರೆ ಸರ್ಕಾರಿ ಭೂಮಿ ಗುರುತಿಸಬೇಕು. ಈ ಬಗ್ಗೆ ವಾರದಲ್ಲಿ ವರದಿ ನೀಡುವಂತೆ ಸೂಚಿಸಿ ದರು ಎಂದು ಮೂಲಗಳು ತಿಳಿಸಿವೆ.
ಡಾ. ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿಯವರ ಹುಟ್ಟೂರು ಬಾನಂದೂರು ಅಭಿವೃದ್ಧಿಗೆ ಡಿಪಿಆರ್ ಸಿದ್ಧವಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ಅಭಿವೃದ್ಧಿ ಕಾರ್ಯಕ್ಕೆ ಅಗತ್ಯವಿರುವ ಹಣ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
-ಸಿ.ಟಿ. ರವಿ, ಸಚಿವ