ನವದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 4 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:ಕ್ರೈಸ್ತ ಉದ್ಯಮಿ ಕಟ್ಟಿಸಿದ ಶ್ರೀ ಸಿದ್ಧಿ ವಿನಾಯಕ ದೇಗುಲದಲ್ಲಿ ಬ್ರಹ್ಮಕಲಶ ಸಂಪನ್ನ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ ಎ) ಅಡಿಯಲ್ಲಿ ತಾತ್ಕಾಲಿಕ ಮುಟ್ಟುಗೋಲು ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯ ವಿಚಾರಣೆಗಾಗಿ ಮೂರು ಬಾರಿ ಸಮನ್ಸ್ ಜಾರಿಗೊಳಿಸಿದ್ದರೂ ಕೂಡಾ ಅನಿಲ್ ದೇಶ್ ಮುಖ್ (72) ಗೈರುಹಾಜರಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ್ ಮುಖ್ ಪುತ್ರ ಹೃಷಿಕೇಶ್ ಮತ್ತು ಪತ್ನಿಗೂ ಫೆಡರಲ್ ತನಿಖಾ ಏಜೆನ್ಸಿ ಸಮನ್ಸ್ ಜಾರಿಗೊಳಿಸಿದ್ದು, ಇವರು ಕೂಡಾ ತನಿಖೆಗೆ ಗೈರುಹಾಜರಾಗಿದ್ದರು.
ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ 100 ಕೋಟಿ ರೂಪಾಯಿ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಂಎಲ್ ಎ ಅಡಿಯಲ್ಲಿ ದಾಖಲಾದ ಕ್ರಿಮಿನಲ್ ಮೊಕದ್ದಮೆಗೆ ಸಂಬಂಧಿಸಿದಂತೆ ಈ ಸಮನ್ಸ್ ಜಾರಿಗೊಳಿಸಿತ್ತು. ಈ ಆರೋಪದ ಬಳಿಕ ಏಪ್ರಿಲ್ ನಲ್ಲಿ ಅನಿಲ್ ದೇಶ್ ಮುಖ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.