Advertisement

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

01:03 PM Sep 20, 2024 | Team Udayavani |

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ (Mysore Dasara) ಉತ್ಸವಕ್ಕೆ ಕೆಲವೇ ದಿನಗಳಷ್ಟೇ ಬಾಕಿ ಇರುವಂತೆ, ದಸರಾ ಉದ್ಘಾಟಕರ ಹೆಸರು ಅಂತಿಮಗೊಳಿಸಲಾಗಿದೆ. ಹಿರಿಯ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ ಅವರು 2024ರ ದಸರಾ ಉದ್ಘಾಟನೆ ಮಾಡಲಿದ್ದಾರೆ.

Advertisement

ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.

ದಸರಾ ಉದ್ಘಾಟನೆಗೆ ಹಲವರ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ಎಲ್ಲಾ ಚರ್ಚೆಗಳ ನಡುವೆ ಸಿಎಂ ಸಿದ್ದರಾಮಯ್ಯನವರೇ ನಾಡಿನ ಹಿರಿಯ ಸಾಹಿತಿ ಪ್ರೊ.ಹಂ.ಪ. ನಾಗರಾಜಯ್ಯ ಅವರನ್ನು ಉದ್ಘಾಟಕರಾಗಿ ಕರೆಸಿದರೆ ಹೇಗೆ ಎಂಬ ಪ್ರಸ್ತಾಪ ಮಾಡಿದ್ದರು. ಹಂಪನಾ ಜೈನ ಸಮುದಾಯಕ್ಕೆ ಸೇರಿದವರಾಗಿದ್ದು, ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಾಗೂ ಹಿರಿಯ ತಲೆಮಾರಿನ ಸಾಹಿತಿ ಎನ್ನುವ ದೃಷ್ಟಿಕೋನದಿಂದ ಅವರನ್ನು ಉದ್ಘಾಟಕರಾಗಿ ಆಯ್ಕೆ ಮಾಡಲು ಸಿಎಂ ಸಿದ್ದರಾಮಯ್ಯ ಇಚ್ಛೆ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿತ್ತು. ಈಗ ಅದರಂತೆ ಹಂಪನಾ ಅವರನ್ನೇ ಆಯ್ಕೆ ಮಾಡಲಾಗಿದೆ.

ಯಾರಿವರು ಹಂ.ಪ. ನಾಗರಾಜಯ್ಯ?

ಕನ್ನಡ ಸಾರಸ್ವತ ಲೋಕದಲ್ಲಿ ಹಂಪನಾ ಎಂದೆ ಚಿರ ಪರಿಚಿತರಾಗಿರುವ ಹಂ.ಪ. ನಾಗರಾಜಯ್ಯನವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಂಪಸಂದ್ರ ಎಂಬ ಗ್ರಾಮದಲ್ಲಿ ಅ.7, 1936 ರಲ್ಲಿ ಶಾನುಬೋಗ ಪದ್ಮನಾಭಯ್ಯ – ಪದ್ಮಾವತಮ್ಮ ದಂಪತಿಯ ಪುತ್ರರಾಗಿ ಜನಿಸಿದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿಎ ಆನರ್ಸ್‌ ಪದವಿ, ಮೈಸೂರು ವಿವಿಯಲ್ಲಿ ಎಂಎ ಪದವಿ ಪಡೆದಿರುವ ಇವರು, ವಡ್ಡಾರಾಧನೆ ಸಮಗ್ರ ಅಧ್ಯಯನಕ್ಕಾಗಿ ಬೆಂಗಳೂರು ವಿವಿಯಿಂದ ಡಾಕ್ಟರೇಟ್‌ ಪದವಿ ಪಡೆದಿದ್ದಾರೆ. 1959ರಿಂದ ಅಧ್ಯಾಪಕ ವೃತ್ತಿ ಜೀವನ ಆರಂಭಿಸಿದ ಹಂಪನಾ ಅವರು ಮೈಸೂರಿನ ಮಹಾರಾಣಿ ಕಾಲೇಜು, ಶಿವಮೊಗ್ಗದ ಸಹ್ಯಾದ್ರಿ ಕಾಲೇಜು, ಮಂಡ್ಯ, ದಾವಣಗೆರೆ, ಬೆಂಗಳೂರಿನ ಸರ್ಕಾರಿ ಕಾಲೇಜು, ಬೆಂಗಳೂರು ವಿವಿಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

Advertisement

ಇದರ ಜತೆಗೆ ಜೈನ ಸಂಶೋಧನ ಕೇಂದ್ರ, ಜೈನ ಅಧ್ಯಯನ ಸಂಸ್ಥೆ, ಕರ್ನಾಟಕ ಸರ್ಕಾರದ ಕನ್ನಡ ಸಂಸ್ಕೃತಿ ನಿರ್ದೇಶನಾಲಯಗಳ ನಿರ್ದೇಶಕರಾಗಿ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 14ಕ್ಕೂ ಹೆಚ್ಚು ಕೃತಿಗಳು 10ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದಿರುವ ಇವರು 2024 ದಸರಾ ಉದ್ಘಾಟನೆ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next