Advertisement

ನಿಖರವಾಗಿರಲಿ ಪ್ರಗತಿಯ ಅಂಕಿ-ಅಂಶ

06:55 PM Feb 26, 2021 | Team Udayavani |

ಯಾದಗಿರಿ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಕೈಗೆತ್ತಿಕೊಂಡಿರುವ ಯೋಜನೆಗಳ ಪ್ರಗತಿಯ ಅಂಕಿ-ಅಂಶಗಳು ನಿಖರ ಹಾಗೂ ಸ್ಪಷ್ಟತೆಯಿಂದ ಕೂಡಿರಲಿ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಡಿಮೆ ಪ್ರಗತಿ ಸಾಧಿಸಿರುವಂತಹ ಇಲಾಖೆಗಳು ಸ್ವಷ್ಟ ಕಾರಣ ನೀಡಬೇಕು ಹಾಗೂ ಅದನ್ನು ಶರಾದಲ್ಲಿ ನಮೂದಿಸಬೇಕು ಎಂದು ಸೂಚಿಸಿದರು.

ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಜಿಲ್ಲೆಯಲ್ಲಿ ಯಾವ್ಯಾವ ಬೆಳೆಗಳಿಗೆ ಬೆಳೆ ವಿಮೆಯಿದೆ ಎಂಬ ಮಾಹಿತಿಯನ್ನು ಸಭೆಗೆ ಒದಗಿಸಬೇಕು ಎಂದು
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಶಾಲಾ ಕಟ್ಟಡ ದುರಸ್ತಿ, ಸಮುದಾಯ ಭವನ ನಿರ್ಮಾಣ ಸೇರಿದಂತೆ ವಿವಿಧ ಇಲಾಖೆಗಳಡಿ ಕೈಗೊಂಡಿರುವ ಕಟ್ಟಡ ನಿರ್ಮಾಣಗಳ ಪ್ರಗತಿ ಬಗ್ಗೆ ನಿರ್ಮಿತಿ ಕೇಂದ್ರ, ಲೋಕೋಪಯೋಗಿ ಇಲಾಖೆಗಳು ಸೇರಿದಂತೆ ವಿವಿಧ ನಿರ್ಮಾಣ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ನಿಖರ ಮಾಹಿತಿಯನ್ನು ಸಭೆಗೆ ಒದಗಿಸಬೇಕು ಎಂದು ಸೂಚಿಸಿದರು.

2020-21ನೇ ಸಾಲಿನಲ್ಲಿ ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ಹಾನಿಗೊಳಗಾದ ಆರೋಗ್ಯ ಕೇಂದ್ರಗಳ ದುರಸ್ತಿ ಕಾಮಗಾರಿಗಳು ಹಾಗೂ ನೆರೆ ಹಾವಳಿಯಿಂದ ಹಾನಿಗೊಳಗಾದ ವಿದ್ಯುತ್‌ ಕಂಬಗಳು, ಟ್ರಾನ್ಸ್‌ ಫಾರ್ಮರ್‌, ಲೈನ್ಸ್‌ ಕಾಮಗಾರಿಗಳ ಕ್ರಿಯಾ ಯೋಜನೆ ಸೇರಿದಂತೆ 14ನೇ ಹಣಕಾಸು ಯೋಜನೆಯಡಿ ಜಿಲ್ಲೆಯಲ್ಲಿ ಪ್ರಾರಂಭಿಸದೇ ಇರುವ 38 ಕಾಮಗಾರಿಗಳ ಸಂಕ್ಷಿಪ್ತ ಮಾಹಿತಿ ಒದಗಿಸುವಂತೆ ಸೂಚನೆ ನೀಡಿದರು. ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next