Advertisement
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್‌ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಮಗಾರಿಗಳನ್ನು ಕೈಗೊಂಡ ಸಮಯದಲ್ಲಿ ಲೋಪಗಳು ಕಂಡು ಬಂದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೊದಲು ನೋಟಿಸ್ ನೀಡಿ ನಂತರ ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಸ್ಮಾರ್ಟ್ ಸಿಟಿ ಕಾಮಗಾರಿಗೆ ಪರಿಸರ ಇಲಾಖೆಯವರು ತಡ ಮಾಡದೆ ಅನುಮತಿ ನೀಡಬೇಕು. ಪರಿಸರ ಇಲಾಖೆಯಿಂದ ಅನುಮತಿ ಸಿಗದ ಕಾರಣ ಸಾಕಷ್ಟು ಕಾಮಗಾರಿಯಲ್ಲಿ ವಿಳಂಬ ಆಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
Related Articles
Advertisement
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಸ್ಥಳೀಯ ಮಟ್ಟದಲ್ಲಿ ಆಗುವ ಕೆಲಸಗಳಿಗೆ ಆದ್ಯತೆ ನೀಡಬೇಕು. ಸರ್ಕಾರಕ್ಕೆ ವರದಿ ಸಲ್ಲಿಸಿ ಅನುಮತಿ ಸಿಗುವವರೆಗೆ ಕಾಯಬೇಡಿ ಎಂದು ಸಲಹೆ ನೀಡಿದರು.
ಸ್ಮಾರ್ಟ್‌ಸಿಟಿ ಕಾಮಗಾರಿಗಳ ಬಗ್ಗೆ ವಿವರಣೆ ನೀಡಿದ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ಈಗಾಗಲೇ 49 ಕೋಟಿ ರೂ. ವೆಚ್ಚದಲ್ಲಿ ಕಮಾಂಡ್ ಸೇಂಟರ್ ನಿರ್ಮಾಣ ಮಾಡಲಾಗಿದೆ. ಒಂಟಮೂರಿಯಲ್ಲಿ 30 ಹಾಸಿಗೆ ಆಸ್ಪತ್ರೆ ನಿರ್ಮಾಣ, 5 ಕೋಟಿ ರೂ. ವೆಚ್ಚದಲ್ಲಿ 11 ಸ್ಮಾರ್ಟ್ ಕ್ಲಾಸ್ ರೂಮ್ ನಿರ್ಮಾಣ ಮಾಡಲಾಗಿದೆ. ನಗರದ 12 ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಮಾಡಲಾಗಿದೆ. 32 ಕೋಟಿ ವೆಚ್ಚದಲ್ಲಿ ಸಿಬಿಟಿ ಬಸ್ ನಿಲ್ದಾಣ ಕಾಮಗಾರಿ ಆರಂಭಿಸಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್ ಮಾತನಾಡಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಎಪಿಎಂಸಿ ರಸ್ತೆಯಲ್ಲಿ ನಿರ್ಮಾಣ ಮಾಡುತ್ತಿರುವ ಕಾಂಪ್ಲೆಕ್ಸ್ ಕಾಮಗಾರಿ ಅಂತಿಮ ಹಂತದಲ್ಲಿದೆ ಎಂದರು. ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರೀತಮ ನಸಲಾಪುರೆ ಮಾತನಾಡಿ, ನಗರಾಭಿವೃದ್ಧಿ ಪ್ರಾಧಿಕಾರವು ಒಟ್ಟು 19 ಯೋಜನೆ ಒಳಗೊಂಡಿದೆ. ಅದರಲ್ಲಿ 17 ಯೋಜನೆಗಳನ್ನು ಪಾಲಿಕೆಗೆ ಹಸ್ತಾಂತರ ಮಾಡಲಾಗಿದೆ ಎಂದರು. ರಾಮತೀರ್ಥ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ವರದಿ ಸಲ್ಲಿಸಲಾಗಿದ್ದು, ಅನುಮೋದನೆ ಸಿಕ್ಕ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು. ಇದಲ್ಲದೆ ಯೋಜನೆ ಸಂಖ್ಯೆ 61ರ ಅಡಿ ಕಣಬರ್ಗಿಯಲ್ಲಿ 23 ಎಕರೆಯಲ್ಲಿ ಹೊಸದಾಗಿ 3,000 ಮನೆಗಳ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.
ವಿಧಾನ ಪರಿಷತ್ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೂಳಪ್ಪ ಹೊಸಮನಿ, ಡಿಸಿ ಡಾ| ಎಸ್.ಬಿ ಬೊಮ್ಮನಹಳ್ಳಿ ಇದ್ದರು. ನಗರದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿಯ ಐದು ಹೆಚ್ಚುವರಿ ವಾಹನಗಳಿಗೆ ಸಚಿವ ರಮೇಶ ಜಾರಕಿಹೊಳಿ ಚಾಲನೆ ನೀಡಿದರು.