Advertisement

ಸ್ಮಾರ್ಟ್‌ಸಿಟಿ ಕಾಮಗಾರಿ ವೇಗ ಹೆಚ್ಚಿಸಿ

07:47 PM Nov 24, 2020 | Suhan S |

ಶಿವಮೊಗ್ಗ: ಸ್ಮಾರ್ಟ್‌ ಸಿಟಿ ಕಾಮಗಾರಿಗಳಿಗೆ ಚುರುಕು ನೀಡಿ ನಿಗದಿತ ಅವಧಿ ಒಳಗಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್‌ ಅವರು ಸೂಚನೆ ನೀಡಿದರು.

Advertisement

ಸೋಮವಾರ ಜಿಲ್ಲಾಡಳಿತ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ಹಾಗೂ ಸಮಸ್ಯೆಗಳ ಬಗ್ಗೆ ಅವರು ಸಮಾಲೋಚನೆ ನಡೆಸಿದರು.

ಮೆಸ್ಕಾಂ, ಕುಡಿಯುವ ನೀರು ಮತ್ತುಒಳಚರಂಡಿ ಮಂಡಳಿಯೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ವಿದ್ಯುತ್‌ ಲೈನ್‌ ಮತ್ತು ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿಪೂರ್ಣಗೊಂಡಿರುವ ಕಡೆಗಳಲ್ಲಿ ತಕ್ಷಣ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿ ಒಳಗಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಆಗುವ ಅನಾನುಕೂಲತೆಯನ್ನು ತಪ್ಪಿಸಬೇಕು ಎಂದು ತಿಳಿಸಿದರು.

ಅಮೃತ್‌ ಯೋಜನೆಯಡಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ 15 ಚರಂಡಿ ಕಾಮಗಾರಿ ಮುಂದಿನ ಮಾರ್ಚ್‌ ಒಳಗಾಗಿಪೂರ್ಣಗೊಳಿಸಬೇಕು. ನಗರ ವ್ಯಾಪ್ತಿಯಲ್ಲಿಅಭಿವೃದ್ಧಿಪಡಿಸಲಾಗಿರುವ ಉದ್ಯಾನವನಗಳ ನಿರ್ವಹಣೆಗಾಗಿ ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡುವ ಕುರಿತು ಅನುಮೋದನೆಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು.

94ಸಿ ಮತ್ತು 94ಸಿಸಿ ಅಡಿಯಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಅರ್ಜಿ ವಿಲೇವಾರಿ ಬಾಕಿ ಇಡಬಾರದು. ಇದೇ ರೀತಿ ಸಾಮಾಜಿಕ ಭದ್ರತಾ ಯೋಜನೆಯಡಿ ಸ್ವೀಕರಿಸಲಾದ ಅರ್ಜಿಗಳನ್ನು ಸಹ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಅವರು ಹೇಳಿದರು.

Advertisement

ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಮಾತನಾಡಿ, ಯೋಜನೆ ಅಡಿ  132 ಕಿಮೀ ಉದ್ದದ ಕುಡಿಯುವ ನೀರಿನ ಪೈಪ್‌ ಲೈನ್‌ ಅಳವಡಿಸಲಾಗುತ್ತಿದ್ದು, ಈಗಾಗಲೇ 85 ಕಿಮೀ ಕಾಮಗಾರಿ ಪೂರ್ಣಗೊಂಡಿದೆ. ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನದಲ್ಲಿ ಶಿವಮೊಗ್ಗ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಹಾಗೂ ರಾಷ್ಟ್ರ ಮಟ್ಟದಲ್ಲಿ 25ನೇ ಸ್ಥಾನದಲ್ಲಿದೆ. ಡಿಸೆಂಬರ್‌ ಅಂತ್ಯದ ಒಳಗಾಗಿ ಈಗಾಗಲೇ ಕೈಗೆತ್ತಿಕೊಂಡಿರುವ 40 ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ನಿಗದಿಯಂತೆ 2022ರ ಜೂನ್‌ ತಿಂಗಳಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ಸಭೆಗೆ ತಿಳಿಸಿದರು.

ಎಲ್ಲಾ ಗ್ರಾಪಂಗಳಲ್ಲಿ ಘನತ್ಯಾಜ್ಯ ಘಟಕಗಳನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೇ 116 ಗ್ರಾಪಂಗಳಲ್ಲಿ ಘಟಕ ಸ್ಥಾಪನೆಗೆ ಭೂಮಿಗುರುತಿಸಲಾಗಿದೆ. 35 ಗ್ರಾಪಂಗಳಿಗೆ ಈಗಾಗಲೇ ಘಟಕ ಸ್ಥಾಪನೆಗೆ 20ಲಕ್ಷ ರೂ. ಬಿಡುಗಡೆಯಾಗಿದೆ. ಇವುಗಳ ಪೈಕಿ 23 ಗ್ರಾಪಂಗಳಲ್ಲಿ ಸಂಪೂರ್ಣ ಕಸ ವಿಲೇವಾರಿ ಪ್ರಕ್ರಿಯೆ ಆರಂಭವಾಗಿದೆ. ಮಾರ್ಚ್‌ ಕೊನೆಯ ಒಳಗಾಗಿ ಎಲ್ಲಾ 272 ಗ್ರಾಪಂಗಳಲ್ಲಿ ಘನತ್ಯಾಜ್ಯ ಘಟಕ ಕಾರ್ಯಾರಂಭ ಮಾಡಲಿವೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್‌. ವೈಶಾಲಿ ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಂ. ಶಾಂತಕುಮಾರ್‌, ಅಪರ ಜಿಲ್ಲಾಧಿಕಾರಿ ಜಿ. ಅನುರಾಧಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next