Advertisement

ಕುಡಿವ ನೀರಿನ ಸಮಸ್ಯೆ ನಿವಾರಿಸಲು ಸೂಚನೆ

02:39 PM Feb 16, 2021 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿನ ಅಭಾವ ಕಂಡು ಬರುತ್ತಿದ್ದು, ಮುಂಬರುವ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ. ಈ ದಿಸೆಯಲ್ಲಿ ಗ್ರಾಮೀಣ ಭಾಗದಲ್ಲಿ ಎಲ್ಲೂ ಕುಡಿಯುವ ನೀರು ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಪಂ ಮಾಸಿಕ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದರು.

ನೀರು ಸರಬರಾಜು ಮಾಡಿ: ಗ್ರಾಮಗಳಲ್ಲಿ ನೀರಿನ ಸಮಸ್ಯೆ ಗಮನಕ್ಕೆ ಬಂದ ಕೂಡಲೇ ಅಲ್ಲಿ ತಾತ್ಕಾಲಿಕವಾಗಿ ನೀರು ಕಲ್ಪಿಸಿ ನಂತರ ಶಾಶ್ವತವಾಗಿ ನೀರು ಕಲ್ಪಿಸಿ ಕೊಡುವತ್ತ ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ಖಾಸಗಿ ಕೊಳವೆಬಾವಿ ಅಥವಾ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಿದರು.

ನೀರು ಸಮಸ್ಯಾತ್ಮಕ ಗ್ರಾಮಗಳು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಶಿವಕುಮಾರ್‌ ಲೋಕೂರ್‌ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 40ಗ್ರಾಮಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕಗ್ರಾಮಗಳೆಂದು ಗುರ್ತಿಸಲಾಗಿದೆ. ಈ ಪೈಕಿ 3 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಹಾಗೂ 37ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಚಿಂತಾಮಣಿ, ಶಿಡ್ಲಘಟ್ಟ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ 11 ಹಾಗೂ ಬಾಗೇಪಲ್ಲಿಯಲ್ಲಿ 3 ಗ್ರಾಮಗಳು ಸಮಸ್ಯಾತ್ಮಕ ಗ್ರಾಮಗಳನ್ನಾಗಿ ಗುರ್ತಿಸಲಾಗಿದ್ದು, ಎಲ್ಲಾ ಕಡೆಗೂ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

3 ಲಕ್ಷ ರೂ.ವರೆಗೆ ಸಹಾಯಧನ: ಕೃಷಿ ಇಲಾಖೆಯಿಂದ ಸಹಾಯಧನದಡಿ ರೈತರಿಗೆ ವಿತರಣೆ ಮಾಡುವ ಮಿನಿ ಟ್ರ್ಯಾಕ್ಟರ್‌ಗಳು ಇನ್ನೂ ರೈತರಿಗೆ ನೀಡಿಲ್ಲ ಎಂಬ ದೂರು ಬಂದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಅಧ್ಯಕ್ಷರು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಲ್‌.ರೂಪಾ, ಜಿಲ್ಲೆಯಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಮಿನಿ ಟ್ರ್ಯಾಕ್ಟರ್‌ಗೆ ಹೆಚ್ಚಿನ ಬೇಡಿಕೆ ಇದೆ. ಈ ಯೋಜನೆಯಡಿ ಫಲಾನುಭವಿಗಳಿಗೆ 3 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುತ್ತಿದೆ. ಹಾಗಾಗಿ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಕಡಿಮೆ ಸಹಾಯಧನ ಇರುವುದರಿಂದ ಇದಕ್ಕೆ ಬೇಡಿಕೆ ಕಡಿಮೆ ಇದೆ. ವಿತರಣೆಗೆ ಬಾಕಿ ಇರುವ ಫಲಾನುಭವಿಗಳಿಗೆ ಟ್ರ್ಯಾಕ್ಟರ್‌ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಅನುದಾನ ಬಳಸಿ: ಜಿಲ್ಲಾ ಪಂಚಾಯಿತಿ ಸಿಇಒ ಪಿ. ಶಿವಶಂಕರ್‌ ಮಾತನಾಡಿ, ಪ್ರಸಕ್ತ ಸಾಲಿನ ಆರ್ಥಿಕ ವರ್ಷ ಮುಗಿಯಲು ಇನ್ನು ಒಂದು ತಿಂಗಳು ಉಳಿದಿದೆ. ಕೆಲವು ಇಲಾಖೆಗಳಲ್ಲಿ ಫೆ.15ಕ್ಕೆ ಅನುದಾನ ಸ್ಥಗಿತಗೊಂಡಿದ್ದು, ಉಳಿದ ಇಲಾಖೆಗಳ ಅನುದಾನ ಯಾವಾಗ ಬೇಕಾದರೂ ಕಡಿತವಾಗಬಹುದು. ಹಾಗಾಗಿ ಎಲ್ಲಾ ಇಲಾಖೆಗಳು ಈ ತಿಂಗಳ ಅಂತ್ಯದೊಳಗೆ ಸಂಪೂರ್ಣವಾಗಿ ಅನುದಾನ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಸರಸ್ವತಮ್ಮ, ಜಿಪಂ ಉಪ ಕಾರ್ಯದರ್ಶಿ ನೋಮೇಶ್‌, ಜಿಪಂ ಮುಖ್ಯ ಲೆಕ್ಕಾಧಿಕಾರಿ ಧನುರೇಣುಕಾ, ಜಿಪಂ ಸ್ಥಾಯಿ ಸಮಿತಿಗಳ ಅಧ್ಯಕ್ಷ ಕೆ.ಸಿ.ರಾಜಾಕಾಂತ್‌ ಮತ್ತು ಬಂಕ್‌ ಮುನಿಯಪ್ಪ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆಸ್ಪತ್ರೆಗೆ ಏನೇನು ಬೇಕು, ಪಟ್ಟಿ ಮಾಡಿ :  ಆರೋಗ್ಯ ಇಲಾಖೆಯಲ್ಲಿ ಕಳೆದ ವರ್ಷದಲ್ಲಿ ಅನುದಾನ ವಾಪಸ್‌ ಹೋಗಿದೆ. ಆದರೆ ಈ ವರ್ಷ ಹಾಗೆ ಆಗಬಾರದು. ಜಿಲ್ಲೆಯ ಆಸ್ಪತ್ರೆಗಳಿಗೆ ಏನೇನು ಅಗತ್ಯವಿದೆ ಎಂಬುದನ್ನು ಪಟ್ಟಿ ಮಾಡಿ, ಅದನ್ನು ಸಚಿವರ ಗಮನಕ್ಕೆ ತಂದು ಆದ್ಯತೆ ಮೇರೆಗೆ ಮಾಡುವಂತೆ ಮನವಿ ಮಾಡಬೇಕು. ವಿವಿಧ ದೊಡ್ಡ ದೊಡ್ಡ ಆಸ್ಪತ್ರೆಗಳ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಪ್ರತಿ ತಿಂಗಳು ಒಂದೆರೆಡು ಆರೋಗ್ಯ ಶಿಬಿರ ಆಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷರು ಸೂಚಿಸಿದರು.

ಮಾದರಿ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲು ಆಯ್ಕೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಇಂದಿರಾ ಕಬಾಡೆ ಮಾತನಾಡಿ, ಜಿಲ್ಲೆಯ ವಿವಿಧ ಕಡೆ ಈಗಾಗಲೇ ಪ್ರತಿಷ್ಠಿತ ಆಸ್ಪತ್ರೆಗಳ ಮೂಲಕ ಆರೋಗ್ಯ ಶಿಬಿರಗಳನ್ನು ಅಯೋಜಿಸಲಾಗುತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ಲು, ಪೆರೇಸಂದ್ರ ಹಾಗೂ ದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಆಯ್ಕೆಯಾಗಿದ್ದು, ರಾಜೀವ್‌ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದಿಂದ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next