ಗೌರಿಬಿದನೂರು: ಮೂಲ ಸೌಕರ್ಯಗಳಿಗೆ ಸಂಬಂಧಿಸಿದ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದ ಅವರು, ಮೊದಲಿಗೆ ಕುಡಿಯುವ ನೀರಿನ ಸಮಸ್ಯೆ ಆಲಿಸಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುವೈದ್ಯ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ರೈತರಿಗೆ ಸರ್ಕಾರದಿಂದ ಬೆಳೆವಾರು ಒದಗಿಸಿರುವ ಸಹಾಯಧನವನ್ನು ಕೂಡಲೇ ರೈತರ ಖಾತೆಗಳಿಗೆ ವರ್ಗಾಯಿಸಲು ಸೂಚಿಸಿದರು.
ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮೀಣ ಭಾಗದ ಎಲ್ಲಾ ಶಾಲೆಗಳಲ್ಲಿ ಮೂಲ ಸೌಕರ್ಯ ಕಡ್ಡಾಯವಾಗಿ ಒದಗಿಸಲು ಸೂಚಿಸಿ, ನರೇಗಾ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸಿಇಒ ಹಾಗೂ ಇಒಗೆ ಆದೇಶಿಸಿದರು. ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗಗಳಲ್ಲಿ ವಸತಿ ರಹಿತರಿಗೆ ನಿವೇಶನ ವಿತರಿಸಲು ಕ್ರಮ ವಹಿಸಬೇಕು, ಲಭ್ಯವಿರುವ ಸರ್ಕಾರಿ ಜಮೀನನ್ನು ಕೂಡಲೇ ಗುರುತಿಸಿ ಆದ್ಯತೆಯ ಮೇರೆಗೆ ಕ್ರಮ ವಹಿಸಲು ತಹಶೀಲ್ದಾರ್‌ಗೆ ಸೂಚಿಸಿದರು.
ಪಿಎಂಜಿಎಸ್‌ವೈ, ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳಿಂದ ನಿರ್ಮಿಸುತ್ತಿರುವ ರಸ್ತೆಗಳ ಗುಣಮಟ್ಟ ವಾರ್ಷಿಕ ನಿರ್ವಹಣೆ ಸೇರಿದಂತೆ ರಸ್ತೆಗಳ ನಿರ್ಮಾಣದಲ್ಲಿಯೂ ಗುಣಮಟ್ಟವನ್ನು ಕಾಪಾಡಲು ಅಧಿಕಾರಿಗಳಿಗೆ ಸೂಚಿಸಿದರು. ಅನುದಾನ ಬಿಡುಗಡೆ: ಲೋಕೋಪಯೋಗಿ ಇಲಾಖೆಯಿಂದ ಇನ್ನೂ ತಾಲೂಕಾದ್ಯಂತ 113 ಕಿ.ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ ಎಂಬ ಅಧಿಕಾರಿಯ ಉತ್ತರಕ್ಕೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆಗಾಗಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು. ಹೆಚ್ಚಿನ ಅರಿವು ಮೂಡಿಸಿ: ಕೋವಿಡ್-19 ನಿಯಂತ್ರಣ ಕ್ರಮಗಳ ಕುರಿತು ಮಾತನಾಡಿದ ಸಚಿವರು, ಕಡ್ಡಾಯ ಮಾಸ್ಕ್ ಧರಿಸುವುದರ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗ ಅಸಮಾಧಾನ ವ್ಯಕ್ತಪಡಿಸಿ, ಈ ಕುರಿತು ಇನ್ನಷ್ಟು ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ತಾಲೂಕು ಆರೋಗ್ಯಾಧಿಕಾರಿ, ತಾಪಂ ಜನಪ್ರತಿನಿಧಿಗಳು ಕೈಕೊಳ್ಳಬೇಕು, ಇದನ್ನು ಆಂದೊಲನದ ರೀತಿ ನಡೆಸಬೇಕು ಎಂದು ಸೂಚಿಸಿದರು.
ಅಮಾನತಿಗೆ ಸೂಚನೆ: ಗ್ರಾಮವಿಕಾಸ ಯೋಜನೆಯಡಿ 47 ಕಾಮಗಾರಿ ಕೈಗೆತ್ತಿಗೊಂಡಿದ್ದು, 33 ಕಾಮಗಾರಿ ಮಾತ್ರ ಪೂರ್ಣಗೊಳಿಸಲಾಗಿದೆ. ಇನ್ನೂ 14 ಕಾಮಗಾರಿಗಳನ್ನು ಅನುಷ್ಠಾನಗೊಳಿಸದೇ ಇರುವುದಕ್ಕೆ ಸಚಿವರು ಬೇಸರ ವ್ಯಕ್ತಪಡಿಸಿ, ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಜಿಪಂ ಸಿಇಒಗೆ ಸೂಚಿಸಿದರು. ಈ ಯೋಜನೆಯಡಿ ಅನುದಾನ ಬಿಡುಗಡೆಯಾಗಿ ನಾಲ್ಕು ವರ್ಷಗಳು ಕಳೆದರೂ ಕಾಮಗಾರಿಗಳು ಇದುವರೆಗೂ ಪೂರ್ಣವಾಗಿ ಅನುಷ್ಠಾನಗೊಳಿಸಿಲ್ಲ. ಇನ್ನೂ ಮೂರು ತಿಂಗಳಲ್ಲಿ ಉಳಿಕೆ 14 ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗೆ ಸೂಚಿಸಿದ ಸಚಿವರು, ನಿರ್ಮಿತಿ ಕೇಂದ್ರ, ಕ್ರೆಡಿಲ್ ಸಂಸ್ಥೆಗಳಿಗೆ ಜಿಲ್ಲೆಯಲ್ಲಿ ಇನ್ನು ಮುಂದೆ ಯಾವುದೇ ಕಾಮಗಾರಿ ನೀಡಬಾರದು ಎಂದು ಎಚ್ಚರಿಸಿದರು.