ತುಮಕೂರು: ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ. 31ರವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ (144 ಸೆಕ್ಷನ್) ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಗಳಿದ್ದು, ಹೆಚ್ಚಿನ ಜನಸಂದಣಿ ಸೇರಬಾರದಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ ಗುಂಪುಗುಂಪಾಗಿ ಜನರು ಸೇರುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಸಾರ್ವಜನಿಕ ಸ್ವಾಸ್ಥ್ಯಕ್ಕೆ ತೊಂದರೆಯಾಗಬಹುದು. ಪ್ರಾಣಹಾನಿಯಾಗುವ ಸಂಭವವಿದೆ ಎಂಬುದನ್ನು ಮನಗಂಡು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ. ಈ ಆದೇಶ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವವರಿಗೆ ಹಾಗೂ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಮತ್ತು ತಾಲೂಕು ಟಾಸ್ಕ್ ಪೋರ್ಸ್ ಸಮಿ ಕಾರ್ಯ ಪ್ರವೃತ್ತವಾಗಿದೆ. ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಆರೋಗ್ಯದ ಹಿತದೃಷ್ಟಿಯಿಂದ ಪಾಲಿಕೆಗೆ ಅನಾವಶ್ಯಕ ಸಾರ್ವಜನಿಕರ ಭೇಟಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಪಾಲಿಕೆ ಕಚೇರಿಯೊಳಗೆ ಪ್ರವೇಶಿಸಲು ಸಂಜೆ 4 ರಿಂದ 5.30ರವರೆಗೆ ಅವಕಾಶ ಕಲ್ಪಿಸಲಾಗಿದೆ.ಎಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್ ತಿಳಿಸಿದ್ದಾರೆ.
ತುರ್ತು ಸೇವೆ, ನೀರು ಮತ್ತು ಸ್ವಚ್ಛತೆ ಮಾಹಿತಿಗೆ ಸಹಾಯವಾಣಿ ಸಂಪರ್ಕಿಸಬಹುದು. ಯಾವುದೇ ವ್ಯಕ್ತಿ ಕೆಮ್ಮು, ನೆಗಡಿ, ಜ್ವರ ಇತ್ಯಾದಿಗಳಿಂದ ಬಳಲುತ್ತಿದ್ದಲ್ಲಿ ಅಂತಹ ವರು ಮನೆಯಲ್ಲೇ ಇರಬೇಕು. ಹ್ಯಾಂಡ್ ಸ್ಯಾನಿಟೈಸರ್ ಮತ್ತು ಮಾಸ್ಕ್ ಕಡ್ಡಾಯವಾಗಿ ಬಳಸಬೇಕು. ಸಾರ್ವಜನಿಕರು ಕೆಲಸ ಮುಗಿದ ನಂತರ ಕಚೇರಿಯಿಂದ ನಿರ್ಗಮಿಸಬೇಕು ಎಂದು ತಿಳಿಸಿದ್ದಾರೆ.