ಬೆಂಗಳೂರು: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ “ನಾಮಪತ್ರ ಸಲ್ಲಿಕೆ ಕೇಂದ್ರಗಳ’ ಸುತ್ತಲಿನ 100 ಮೀ. ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸೋಮವಾರ ಆದೇಶ ಹೊರಡಿಸಿದ್ದಾರೆ.
ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಿರುವ ನಗರದ ಎಲ್ಲ ಕೇಂದ್ರಗಳ ಸುತ್ತಲ ಜಾರಿಗೊಳಿಸಿರುವ ನಿಷೇಧಾಜ್ಞೆ ಮಂಗಳವಾರ 6 ಗಂಟೆಯಿಂದ ಜಾರಿಗೆ ಬರಲಿದ್ದು, ಏ.24ರ ಸಂಜೆ 6 ಗಂಟೆಯವರೆಗೆ ಮುಂದುವರಿಯಲಿದೆ ಎಂದು ಆದೇಶದಲ್ಲಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಅಲ್ಲದೆ ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಆಯಾ ವಿಧಾನಸಭಾ ಕ್ಷೇತ್ರದ ನಾಮಪತ್ರ ಸಲ್ಲಿಕೆ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಉದ್ದೇಶದಿಂದ ಐದು ಅಥವಾ ಐದಕ್ಕಿಂತ ಹೆಚ್ಚು ಜನ ಒಂದೇ ಕಡೆ ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ. ಸ್ಫೋಟಕ ವಸ್ತುಗಳು, ಕಲ್ಲು, ಮಾರಕಾಸ್ತ್ರಗಳನ್ನು ಇಟ್ಟುಕೊಳ್ಳುವಂತಿಲ್ಲ.
ಜತೆಗೆ ಯಾವುದೇ ನಿರ್ದಿಷ್ಟ ವ್ಯಕ್ತಿ ವಿರುದ್ಧ ಪ್ರಚೋದನಕಾರಿ ಘೋಷಣೆ ಕೂಗುವುದು, ಹಾಡುವುದು, ಸಂಜ್ಞೆಗಳು, ಹಾಡುಗಾರಿಕೆಯನ್ನು, ಭಿತ್ತಿ ಪತ್ರ ಪ್ರದರ್ಶನ, ಸಂಗೀತ ನುಡಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.ಒಂದು ವೇಳೆ ನಿಷೇಧಾಜ್ಞೆ ನಿಯಮಗಳನ್ನು ಪಾಲಿಸದಿದ್ದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಆಯುಕ್ತರು ತಿಳಿಸಿದರು.
ಗುಪ್ತಚರ ವರದಿ: ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜತೆಗೆ ಅವರ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಆಗಮಿಸುವುದರಿಂದ ರಸ್ತೆ ತಡೆ, ಪ್ರತಿಭಟನೆಗಳು ಜರುಗುವ ಸಾಧ್ಯತೆಗಳಿರುವುದರಿಂದ ಸಂಚಾರ ದಟ್ಟಣೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಲಿದೆ.
ಅಲ್ಲದೆ ಈ ಪರಿಸ್ಥಿತಿಗಳ ದುರ್ಲಾಭ ಪಡೆದುಕೊಂಡು ಸಮಾಜಘಾತುಕ ಶಕ್ತಿಗಳು ಹಾಗೂ ದುಷ್ಕರ್ಮಿಗಳು ಅಹಿತಕರ ಘಟನೆಗಳನ್ನು ನಡೆಸಿ, ಸಾರ್ವಜನಿಕರ ಆಸ್ತಿ ಪಾಸ್ತಿ ನಷ್ಟವುಂಟು ಮಾಡುವ ಸಾಧ್ಯತೆ ಬಗ್ಗೆ ಗುಪ್ತಚರ ವರದಿ ಆಧರಿಸಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.