ಬೆಂಗಳೂರು: ಮಹತ್ವಾಕಾಂಕ್ಷೆಯ ಮತ್ತು ವಿವಾದಕ್ಕೆ ಕಾರಣವಾಗಿರುವ ಎಸ್‌ಸಿ, ಎಸ್‌ಟಿ ನೌಕರರ ಬಡ್ತಿ ಮೀಸಲಾತಿ ವಿಧೇಯಕಕ್ಕೆ ಅಂಕಿತ ಹಾಕುವಂತೆ ರಾಜ್ಯಪಾಲರ ಮನವೊಲಿಸಲು ಸರ್ಕಾರ ನಡೆಸಿದ ಪ್ರಯತ್ನ ವಿಫಲವಾಗಿದೆ.
ಬಡ್ತಿ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದರೂ ಸರ್ಕಾರ ವಿಧೇಯಕ ರೂಪಿಸಿದ ಹಿನ್ನೆಲೆಯಲ್ಲಿ ಇದು ಕಾನೂನಿಗೆ ಸಂಬಂಧಿಸಿದ ವಿಚಾರ ಎಂಬ ಕಾರಣಕ್ಕೆ ವಿಧೇಯಕಕ್ಕೆ ಅಂಕಿತ ಹಾಕಲು ನಿರಾಕರಿಸಿರುವ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲು ನಿರ್ಧರಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಎಸ್‌ಸಿ, ಎಸ್‌ಟಿ ಬಡ್ತಿ ಮೀಸಲು ವಿಧೇಯಕಕ್ಕೆ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತಾದರೂ ಅದಕ್ಕೆ ರಾಜ್ಯಪಾಲರು ಸಹಿ ಹಾಕದೆ ತಡೆಹಿಡಿದಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತಿ ಸಿದ್ದರಾಮಯ್ಯ ಹಾಗೂ ಕಾನೂನು ಸಚಿವ ಟಿ.ಬಿ.ಜಯಚಂದ್ರ ಸೋಮವಾರ ರಾಜ್ಯಪಾಲರನ್ನು ಭೇಟಿ ಮಾಡಿ, ವಿಧೇಯಕಕ್ಕೆ ಅಂಕಿತ ಹಾಕುವಂತೆ ಅವರ ಮನವೊಲಿಸಲು ಪ್ರಯತ್ನಿಸಿದರು.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಸ್‌ಸಿ, ಎಸ್‌ಟಿ ನೌಕರರ ಸ್ಥಿತಿಗತಿ ಅಧ್ಯಯನ ನಡೆಸಲು ಹಾಲಿ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿ ನೀಡಿದ ವರದಿ ಆಧರಿಸಿಯೇ ಮೀಸಲಾತಿಯಲ್ಲಿ ಭಡ್ತಿ ನೀಡುವುದನ್ನು ಕಾಯ್ದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದರು. ಆದರೆ, ಸರ್ಕಾರದ ಈ ಸಮಜಾಯಿಷಿಗೆ ಒಪ್ಪದ ರಾಜ್ಯಪಾಲರು, ಇದು ಸುಪ್ರೀಂ ಕೋರ್ಟ್ ತೀರ್ಪಿಗೆ ಸಂಬಂಧಿಸಿದ್ದ ಪ್ರಕರಣವಾಗಿದ್ದರಿಂದ ವಿಧೇಯಕವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲು ತೀರ್ಮಾನಿಸಿದ್ದಾರೆ.
ಇದೇ ವೇಳೆ ರಾಜ್ಯ ಸರ್ಕಾರ ವಿಧಾನಮಂಡಲದಲ್ಲಿ ಅಂಗೀಕರಿಸಿ ಕಳುಹಿಸಿಕೊಟ್ಟ ಇನ್ನೂ ಕೆಲವು ವಿಧೇಯಕಗಳ ಬಗ್ಗೆಯೂ ರಾಜ್ಯಪಾಲರೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು ಹಾಗೂ ಕಾನೂನು ಸಚಿವರು, ಅವುಗಳಿಗೂ ಅಂಕಿತ ಹಾಕುವಂತೆ ಮನವಿ ಮಾಡಿದರು ಎನ್ನಲಾಗಿದೆ.
ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಡ್ತಿ ಮೀಸಲು ವಿಧೇಯಕದ ಬಗ್ಗೆ ವಿವರಣೆ ನೀಡಲು ರಾಜ್ಯಪಾಲರನ್ನು ಭೇಟಿ ಮಾಡಲಾಗಿತ್ತು. ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ರತ್ನಪ್ರಭಾ ಅವರಿಂದ ವರದಿ ಪಡೆದು ಬಡ್ತಿಯಲ್ಲಿ ಮೀಸಲಾತಿ ನೀಡಲು ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಆದರೆ, ಆತುರ ಮಾಡದೇ ಎರಡೂ ಸದನದಲ್ಲಿಟ್ಟು ವಿಧೇಯಕ ಅಂಗೀಕರಿಸುವಂತೆ ರಾಜ್ಯಪಾಲರು ಸೂಚಿಸಿದ್ದರು. ಅದರಂತೆ ಬೆಳಗಾವಿ ಅಧಿವೇಶನದಲ್ಲಿ ಎರಡೂ ಸದನದಲ್ಲಿ ಚರ್ಚಿಸಿ ವಿಧೇಯಕ ಅಂಗಿಕಾರ ಪಡೆದು ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ. ಆದರೆ, ಇದು ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿದ ಕಾನೂನು ಆಗಿರುವುದರಿಂದ ರಾಜ್ಯಪಾಲರು ವಿಧೇಯಕವನ್ನು ರಾಷ್ಟ್ರಪತಿಗೆ ಕಳುಹಿಸುವುದಾಗಿ ಹೇಳಿರುವುದಾಗಿ ತಿಳಿಸಿದರು. ಅಲ್ಲದೆ, ವಿಧೇಯಕ ರಾಷ್ಟ್ರಪತಿಗಳಿಗೆ ರವಾನೆಯಾದ ಬಳಿಕ ಅವರನ್ನು ಭೇಟಿಯಾಗಿ ಅಂಗೀಕಾರಕ್ಕಾಗಿ ಮನವಿ ಸಲ್ಲಿಸುವುದಾಗಿ ಹೇಳಿದರು.