ಬೀದರ: ವಿಶ್ವಕರ್ಮ ಸಮುದಾಯ ಭವನಕ್ಕೆ ನಿವೇಶನ ನೀಡುವುದು ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಬೇಡಿಕೆಗಳೇನಾದರು ಇದ್ದರೆ ಅವುಗಳನ್ನು ಆದ್ಯತೆ ಮೇರೆಗೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿಶ್ವಕರ್ಮ ಸೇರಿದಂತೆ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಹಿಂದುಳಿದ ವರ್ಗದವರು ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿ ಸಾಧಿಸಬೇಕು. ಇದಕ್ಕೆ ಬೇಕಾದ ಸಹಾಯ ಮಾಡಲು ಸರ್ಕಾರ ಬದ್ಧವಾಗಿದೆ. ವಿದ್ಯಾರ್ಥಿಗಳಿಗೆ ಕೌಶಾಲಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಉನ್ನತ ವ್ಯಾಸಾಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅಗತ್ಯ ಸಹಾಯಧನ ನೀಡಲಾಗುತ್ತಿದೆ ಎಂದು ಹೇಳಿದರು.
ಉಪನ್ಯಾಸ ನೀಡಿದ ಕಲಬುರಗಿ ಸಾಹಿತಿ ನರಸಿಂಹ ಹೇಮನೂರು, ವಿಶ್ವಕರ್ಮರು ಈ ಜಗತ್ತಿನ ಸೃಷ್ಟಿ ಕರ್ತರಾಗಿದ್ದಾರೆ. ಈ ಬಗ್ಗೆ ವೇದ, ಪುರಾಣಗಳಲ್ಲಿ ಉಲ್ಲೇಖವಿದೆ. ಈ ಸಮುದಾಯವರು ಮಹಾನ್ ಕಲಾವಿದರಾಗಿದ್ದು, ಬೇಲೂರ, ಐಹೊಳೆ, ಬಾದಾಮಿ, ಪಟ್ಟದಕಲ್ಲು ಮುಂತಾದ ಸ್ಥಳಗಳು ಇವರ ಪಾಂಡಿತ್ಯದ ಕುರುಹುಗಳಾಗಿವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ರಹೀಮ್ ಖಾನ್ ಮಾತನಾಡಿ, ಹಿಂದುಳಿದ ಜನಾಂಗದ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆ ರೂಪಿಸಿ ಅನು‚ಷ್ಠಾನಗೊಳಿಸುತ್ತಿದೆ. ಜಿಲ್ಲೆಯ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿಗಳಾಗಿ ಸಾವಿರ ಕೋಟಿ ರೂ. ಅನುದಾನ ತಂದಿದ್ದೇವೆ. 450 ಹಾಸಿಗೆ ನೂತನ ಆಸ್ಪತ್ರೆ ಜನಸೇವೆಗೆ ಲಭ್ಯವಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು. ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ನಗರಸಭೆ ಅಧ್ಯಕ್ಷೆ ಶಾಲಿನಿ ರಾಜು ಚಿಂತಾಮಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜಯ ಜಾಗೀರದಾರ್, ಜಿಪಂ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ, ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ ಹೊಗಿಬಂಡಿ ಇದ್ದರು.
ಡಿ.ಎಸ್. ಜೋಶಿ ನಿರೂಪಿಸಿದರು. ಕಲಾವಿದರಾದ ಶಿವಕುಮಾರ ಪಾಂಚಾಳ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.