ಹಾವೇರಿ: ಮಕ್ಕಳ ಹುಕ್ಕುಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಸಮಾಜದಲ್ಲಿ ಶೋಷಣೆ ಹಾಗೂ ದೌರ್ಜನ್ಯಕ್ಕೊಳಗಾದ 18 ವರ್ಷದೊಳಗಿನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದರ ಜೊತೆಗೆ ಉತ್ತಮ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಎಲ್ಲರೂ ಕೈಜೋಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧಿಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ ಹಾಗೂ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಸಹಯೋಗದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸಾರ್ವಜನಿಕ ಮಕ್ಕಳ ಅಹವಾಲು, ವಿಚಾರಣೆ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಸಮಸ್ಯೆಗಳನ್ನು ಆಲಿಸಲು ಇಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಮಕ್ಕಳು ತಮ್ಮ ವೈಯಕ್ತಿಕ ಹಾಗೂ ಶಾಲಾ-ಕಾಲೇಜುಗಳಲ್ಲಿನ ಸಮಸ್ಯೆಗಳನ್ನು ಯಾವುದೇ ಸಂಕೋಚವಿಲ್ಲದೆ ಹೇಳಿಕೊಳ್ಳಬೇಕು. ಇಲ್ಲಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು. ಕೋವಿಡ್ ಸಮಯದಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಕಾನೂನು ಸಮಸ್ಯೆಗಳಿದ್ದರೆ ಅಂತಹ ಮಕ್ಕಳಿಗೆ ಉಚಿತ ಕಾನೂನು ನೆರವು ಒದಗಿಸಲಾಗುವುದು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಭಾರತಿ ವಾಳ್ವೇಕರ ಮಾತನಾಡಿ, ಮಕ್ಕಳ ಮೇಲೆ ನಡೆದ ದೌರ್ಜನ್ಯಗಳು, ಕಿರುಕುಳ, ಸಮಸ್ಯೆಗಳನ್ನು ಮಕ್ಕಳಿಂದಲೇ ತಿಳಿದುಕೊಂಡು ಸಮಸ್ಯೆ ಬಗೆಹರಿಸಲು ರಾಜ್ಯದ 30 ಜಿಲ್ಲೆಗಳಲ್ಲಿ ಸಾರ್ವಜನಿಕ ಮಕ್ಕಳ ಅಹವಾಲು ವಿಚಾರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಬಾರಿ ವಲಯ ಮಟ್ಟದ ಕಾರ್ಯಕ್ರಮವನ್ನು ಬಾಗಲೋಟೆಯಲ್ಲಿ ಆಯೋಜಿಸಲಾಗಿತ್ತು. ಅತ್ಯಂತ ಯಶಸ್ವಿಯಾಗಿ ಜರುಗಿತು. ಎಲ್ಲ ಮಕ್ಕಳಿಗೂ ಕಾರ್ಯಕ್ರಮಕ್ಕೆ ಆಗಮಿಸಲು ಆಗುವುದಿಲ್ಲ. ಅಂತಹ ಸಂದರ್ಭದಲ್ಲಿ ಪ್ರತಿನಿಧಿಗಳು ಸಮಸ್ಯೆ ಹೇಳಿಕೊಳ್ಳಬಹುದು ಎಂದರು.
ಸಂವಿಧಾನ ಮಕ್ಕಳಿಗೆ ಅನೇಕ ಹಕ್ಕುಗಳನ್ನು ನೀಡಿದೆ. ಮಕ್ಕಳ ಹಕ್ಕುಗಳ ರಕ್ಷಣೆಗೆ ಬಲಿಷ್ಠ ಕಾನೂನು ರೂಪಿಸಿದರೂ ಸಹ ಮಕ್ಕಳ ಶೋಷಣೆ, ದೌರ್ಜನ್ಯ ನಡೆಯುತ್ತಿರುವುದು ವಿಷಾದಕರ ಸಂಗತಿ. ಮಕ್ಕಳು ಬಾಲ್ಯ ವಿವಾಹ, ಭಿಕ್ಷಾಟನೆ ಹಾಗೂ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಮಟ್ಟದಿಂದಲೇ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ಪೋಸ್ಟರ್ ಬಿಡುಗಡೆ ಮಾಡಿ, ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು. ಮಾಸಣಕಟ್ಟಿ ಗ್ರಾಮದ ವಿಶೇಷ ಚೇತನ ಮಗು ಲಿಂಗರಾಜನಿಗೆ ಚೇರ್ ವಿತರಿಸಲಾಯಿತು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಿಕಾರ್ಜುನ ಮಠದ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್, ಡಿಡಿಪಿಐ ಬಿ.ಎಸ್. ಜಗದೀಶ್ವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಪಿಎಸ್‌ಐ ಎನ್.ಆರ್.ಕಾಟೆ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ, ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಸೇರಿದಂತೆ ವಿವಿಧ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.