ಮಂಡ್ಯ: ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗೆ ಕೆಆರ್‌ಎಸ್ ಹಾಗೂ ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘದ ಕಾರ್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿ ಪ್ರವೇಶ ದ್ವಾರದ ಬಳಿ ಪ್ರತಿಭಟಿಸುತ್ತಿರುವ ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಾಲೆಗೆ ನೀರು ಹರಿಸುವ ವಿಚಾರದಲ್ಲಿ ಹಿಡಿದಿರುವ ಪಟ್ಟನ್ನು ಸಡಿಲಿಸದೆ ಅಧಿಕಾರಿಗಳ ಮನವೊಲಿಕೆಗೂ ಮಣಿಯದೆ ಧರಣಿ ಮುಂದುವರಿಸಿದ್ದಾರೆ.
ಜಮೀನುಗಳಲ್ಲಿ ಒಣಗುತ್ತಿರುವ ಬೆಳೆಯನ್ನು ಉಳಿಸಿಕೊಳ್ಳಲು ಕೆಆರ್‌ಎಸ್ ಮತ್ತು ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ತಕ್ಷಣವೇ ನೀರು ಹರಿಸಬೇಕು. ನಿರಂತರ ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ರೈತರು ಸಾಲ ಮಾಡಿ ಬೆಳೆ ಬೆಳೆದಿದ್ದಾರೆ. ಇದೀಗ ಸುಮಾರು 34 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದು ನಿಂತಿರುವ ಕಬ್ಬಿಗೆ ನೀರಿನ ಅವಶ್ಯಕತೆ ಇದೆ. ಇದು ಸರ್ಕಾರ ಮತ್ತು ಅಧಿಕಾರಿಗಳಿಗೆ ಅರ್ಥವಾಗದೆ ರೈತರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ದೂರಿದರು.
ಕಾರ್ಖಾನೆಗಳಿಂದ ರೈತ ವಿರೋಧಿ ನೀತಿ: ಸಕ್ಕರೆ ಕಾರ್ಖಾನೆಗಳಿಗೆ ರೈತರು ಕಬ್ಬು ಪೂರೈಸಿ ಆರು ತಿಂಗಳಾದರೂ ಹಣ ಪಾವತಿಸಿಲ್ಲ. ಕಬ್ಬಿನ ಬಾಕಿ ಪಾವತಿ ಮಾಡದೆ ಕಾರ್ಖಾನೆ ಆಡಳಿತ ಮಂಡಳಿ ಬೇಜವಾಬ್ದಾರಿತನ ಪ್ರದರ್ಶಿಸಿವೆ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿ ಶೀಘ್ರ ಬಾಕಿ ಹಣ ಪಾವತಿಸುವಂತೆ ಎಚ್ಚರಿಕೆ ನೀಡಿದ್ದರೂ ಹಣ ಕೊಡದೇ ರೈತ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಟೀಕಿಸಿದರು.
ಕಬ್ಬು ನುರಿಸುವಿಕೆ ಆರಂಭಿಸಿ: ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯ ಮತ್ತು ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು. ಎರಡೂ ಕಾರ್ಖಾನೆಗಳಲ್ಲಿ ಶೀಘ್ರ ಕಬ್ಬು ನುರಿಸುವಿಕೆ ಆರಂಭಿಸಬೇಕು. ಅದಕ್ಕೆ ಅಗತ್ಯವಿರುವ ಹಣವನ್ನು ಸರ್ಕಾರ ಈ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ಪ್ರಸಕ್ತ ಸಾಲಿನಲ್ಲಿ ಈಗಾಗಲೇ ಭತ್ತದ ಕೊಯ್ಲು ನಡೆಯುತ್ತಿದ್ದು, ಶೀಘ್ರ ಕೇಂದ್ರ ಸ್ಥಾಪಿಸಿ ಖರೀದಿ ಮಾಡಬೇಕು. ಮುಂದಿನ ಹಂಗಾಮಿನ ಬೆಳೆ ಬೆಳೆಯಲು ಸಹಕಾರ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕು ಮೂಲಕ ರೈತರಿಗೆ ಸಾಲ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್, ಜಿ.ಎಸ್.ಲಿಂಗಪ್ಪಾಜಿ, ಬಿ.ಬೊಮ್ಮೇಗೌಡ, ಶೆಟ್ಟಹಳ್ಳಿ ರವಿಕುಮಾರ್, ಪಿ.ಕೆ.ನಾಗಣ್ಣ, ಸಿದ್ದೇಗೌಡ ಇತರರಿದ್ದರು.