Advertisement

ಸರ್ಕಾರದ ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

06:47 AM Jun 02, 2019 | Team Udayavani |

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಕೆರೆ ಸೇರಿದಂತೆ ವಿವಿಧ ಕೆರೆಗಳಿಗೆ ನದಿ ಮೂಲದಿಂದ ನೀರು ತುಂಬಿಸಲು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಹಾಗೂ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ರೈತರ ಸಮಸ್ಯೆಯ ಬಗ್ಗೆ ಚರ್ಚಿಸಲು ಸಭೆ ಕರೆಯುವಂತೆ ಆಗ್ರಹಿಸಿ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

Advertisement

ನಗರದ ಚಾಮರಾಜೇಶ್ವರ ದೇವಸ್ಥಾನದ ಮಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ರೈತರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ನಂತರ ಸಮಸ್ಯೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಬಂದು ಸ್ಪಷ್ಟನೆ ನೀಡುವವರೆಗೂ ಪ್ರತಿಭಟನೆ ಹಿಂತೆಗೆಯುವುದಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌, ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಕೆರೆಗೆ ಮೂರು ತಿಂಗಳ ಹಿಂದೆಯೇ ಹುತ್ತೂರು ಕೆರೆಯಿಂದ ಏತ ನೀರಾವರಿ ಮೂಲಕ ನೀರು ಹರಿಸುವ ಕಾಮಗಾರಿ ಪೂರ್ಣಗೊಂಡಿದ್ದು, ಉಸ್ತುವಾರಿ ಸಚಿವರು ಹಾಗೂ ಶಾಸಕರ ವೈಮನಸ್ಸಿನಿಂದ ಚಾಲನೆ ನೀಡದೆ ನೆನೆಗುದಿಗೆ ಬಿದ್ದಿದೆ, ಈ ಬಗ್ಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ ಎಂದರು.

ಒಂದು ವಾರದೊಳಗೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ರೈತರೇ ಉದ್ಘಾಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಬೂದಂಬಳ್ಳಿ ಗ್ರಾಮದಲ್ಲಿ ಮಹಿಳಾ ಡೈರಿ ಇದ್ದು ಇದು ಸರಿಯಾಗಿ ನಡೆಯುತ್ತಿಲ್ಲ ಇಲ್ಲಿಗೆ ಸಾಮಾನ್ಯ ಡೈರಿಗೆ ಅವಕಾಶ ಮಾಡಿಕೊಡಬೇಕು, ಸಂಬಂಧಪಟ್ಟ ಅಧಿಕಾರಿಗಳು ಬಂದು ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಇದೇ ರೀತಿ ಆನೆ ಮಡುವಿನ ಕೆರೆ ಸೇರಿದಂತೆ ಯೋಜನೆಗೆ ಸೇರಿರುವ ಇತರ ಕೆರೆಗಳಿಗೂ ನೀರು ಹರಿಸಬೇಕು, ಜಿಲ್ಲೆಯಲ್ಲಿ ರೈತರ ಜಮೀನುಗಳಲ್ಲಿ ಟಿಸಿಗಳು ಸುಟ್ಟರೆ ಸೆಸ್ಕಾಂರವರು ತಕ್ಷಣ ಸ್ಪಂದಿಸದೇ ಇರುವುದರಿಂದ ಬೆಳೆಗಳು ನಾಶವಾಗುತ್ತದೆ. ಈ ಬಗ್ಗೆ ಕೆಇಬಿ ಇಂಜಿನಿಯರ್‌ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisement

ನಾಲ್ಕು ತಿಂಗಳ ಹಿಂದೆಯೇ ಭಾರಿ ಪ್ರತಿಭಟನೆ ಮಾಡಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಕರೆದು ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರನ್ನು ಆಗ್ರಹಿಸಿದ್ದರೂ ಸಭೆ ಕರೆದಿಲ್ಲ, ನಿಮ್ಮ ವಿಳಂಬ ನೀತಿಯಿಂದ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ. ಇದರಿಂದ ಸಾಮಾನ್ಯ ರೈತರಿಗೆ ಅನ್ಯಾಯವಾಗುತ್ತದೆ, ತಕ್ಷಣ ಸಭೆ ಕರೆಯುವಂತೆ‌ ಆಗ್ರಹಿಸಿದರು.

ಇನ್ನು 15 ದಿನಗಳೊಳಗಾಗಿ ಸಭೆ ಕರೆಯದಿದ್ದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ಪ್ರತಿಭಟನಾ ಸ್ಥಳಕ್ಕೆ ಉಪವಿಭಾಗಾಧಿಕಾರಿ ಹಾಗೂ ಕೆಲ ಅಧಿಕಾರಿಗಳು ಬಂದು ಸ್ಪಷ್ಟನೆ ನೀಡಿದ ನಂತರ ಪ್ರತಿಭಟನೆ ಅಂತ್ಯಗೊಳಿಸಲಾಯಿತು.

ಪ್ರತಿಭಟನೆಯಲ್ಲಿ ಪ್ರಧಾನಕಾರ್ಯದರ್ಶಿ ಡಾ.ಗುರುಪ್ರಸಾದ್‌, ಕಾರ್ಯಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಖಜಾಂಚಿ ಅಂಬಳೆ ಶಿವಕುಮಾರ್‌, ಮಹೇಶ್‌, ಬಸವಣ್ಣ , ಜಗದೀಶ್‌, ಸಿದ್ದಶೆಟ್ಟರು, ಮಹದೇವಶೆಟ್ಟಿ ಮತ್ತು ರೈತರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next