ರಾಮನಗರ: ಬೆಂ-ಮೈ ದಶಪಥ ಹೆದ್ದಾರಿಯ ಅಪೂರ್ಣ ಕಾಮಗಾರಿಗೆ ದುಬಾರಿ ಟೋಲ್ ಸಂಗ್ರಹಣೆ ಮಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿ ಕಾರದ ಕ್ರಮವನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಹೋರಾಟಗಾರರು ಕಣಿ ಮಿಣಿಕೆ ಟೋಲ್‌ಪ್ಲಾಜಾ ಬಳಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.
ಕರವೇ ಸ್ವಾಭಿಮಾನಿ ಬಣದ ವತಿಯಿಂದ ಹಮ್ಮಿ ಕೊಂಡಿದ್ದ ಪ್ರತಿಭಟಣೆಯಲ್ಲಿ ಟೋಲ್ ದರ ಸಂಗ್ರ ಹಿಸುತ್ತಿರುವ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕನ್ನಡಪರ ಕಾರ್ಯ ಕರ್ತರು, ಕಾಮಗಾರಿಯನ್ನು ಪೂರ್ಣ ಗೊಳಿಸುವುದಕ್ಕೆ ಮುನ್ನಾ ಟೋಲ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿರುವುದು ಅನ್ಯಾಯ. ಕೂಡಲೇ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.
ಬೆಂಗಳೂರು-ಮೈಸೂರು ಮಹಾನಗರಗಳ ನಡುವೆ ಸುಗಮ ಸಂಚಾರ ಕಲ್ಪಿ ಸುವ ಉದ್ದೇಶದಿಂದ ದಶಪಥ ಹೆದ್ದಾರಿಯನ್ನು ನಿರ್ಮಾಣ ಮಾಡಲಾಗಿದೆ. ಹೆದ್ದಾ ರಿಗೆ ನಿರ್ಮಾಣ ಕಾಮಗಾರಿಗೆ ಸ್ಥಳೀಯರ ಭೂಮಿಯನ್ನು ನೀಡಲಾಗಿದೆ. ಸಾರ್ವ ಜನಿಕ ತೆರಿಗೆ ಹಣದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. ಕಾಮಗಾರಿ ಇನ್ನೂ ಸಂಪೂರ್ಣಗೊಂಡಿಲ್ಲ. ಸರ್ವೀಸ್ ರಸ್ತೆ ಕಾಮಗಾರಿ ಅಪೂರ್ಣಗೊಂಡಿದೆ. ಇದ ರಿಂದಾಗಿ ಟೋಲ್ ಸಂಗ್ರಹಣೆ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೂಲ ಸೌಕರ್ಯ ಕಲ್ಪಿಸಿ: ಹೆದ್ದಾರಿ ಕಾಮಗಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆದಿದ್ದು, ಇದರಿಂದಾಗಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿವೆ, ನೂರಾರು ಜೀವಗಳು ಬಲಿಯಾಗಿದ್ದು, ಇದರ ಬಗ್ಗೆ ಬೇಜವಾಬ್ದಾರಿಯಿಂದ ಪ್ರಾಧಿಕಾರ ವರ್ತಿಸುತ್ತಿದೆ. ಹೆದ್ದಾರಿಯಲ್ಲಿನ ಅವೈಜ್ಞಾನಿಕ ಅಂಶಗಳನ್ನು ಸರಿಪಡಿಸದ ಹೊರತು ಟೋಲ್ ಸಂಗ್ರಹಣೆ ಮಾಡುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದರು.
ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯಲ್ಲಿರುವ ಸರ್ವಿಸ್ ರಸ್ತೆ ಗುಣಮಟ್ಟದಿಂದ ನಿರ್ಮಿಸದ ಕಾರಣ ಮೂರೇ ತಿಂಗಳಿಗೆ ಅಲ್ಲಲ್ಲಿ ಕಿತ್ತು ಬಂದಿದೆ. ಸರ್ವಿಸ್ ರಸ್ತೆಯಲ್ಲಿ ಬಸ್ ತಂಗುದಾಣಗಳನ್ನು ಸ್ಥಾಪಿಸಿಲ್ಲ. ಪ್ರಯಾಣಿಕರಿಗೆ ಆ್ಯಂಬುಲೆನ್ಸ್ ಹಾಗೂ ಪ್ರಥಮ ಚಿಕಿತ್ಸೆ ಸೇರಿದಂತೆ ಯಾವುದೇ ಸುರಕ್ಷತಾ ಕ್ರಮ ಕೈಗೊಂಡಿಲ್ಲ. ಹೆದ್ದಾರಿ ಪ್ರಯಾಣಿಕರಿಗೆ ಶೌಚಾಲಯ ವ್ಯವಸ್ಥೆ ಮಾಡಿಲ್ಲ. ಹೋಟೆಲ್ ಮತ್ತು ವಿಶ್ರಾಂತಿ ಗೃಹ ನಿರ್ಮಿಸಿಲ್ಲ. ಈ ಎಲ್ಲಾ ಮೂಲ ಸೌಕರ್ಯಗಳನ್ನು ಕಲ್ಪಿಸಿ ತದನಂತರ ಶುಲ್ಕ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಹೆದ್ದಾರಿಯ ಎರಡೂ ಬದಿಯ ಸರ್ವೀಸ್ ರಸ್ತೆಯನ್ನು ದುರಸ್ತಿಪಡಿಸಬೇಕು. ರೈತರು, ಮಾಧ್ಯಮದವರು ಮತ್ತು ಹೋರಾಟಗಾರರಿಗೆ ಎಲ್ಲಾ ಟೋಲ್ ಪ್ಲಾಜಾ ಗಳಲ್ಲಿ ಉಚಿತ ಪ್ರವೇಶಕ್ಕೆ ಅನುಮತಿ ಕೊಡಬೇಕು. ದುಬಾರಿ ಟೋಲ್ ಸಂಗ್ರಹವನ್ನು ಕೈ ಬಿಡಬೇಕು. ಸರ್ಕಾರ ಈ ವಿಚಾರದಲ್ಲಿ ಮಧ್ಯೆ ಪ್ರವೇಶಿಸಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ತಪ್ಪಿದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಇದೇ ವೇಳೆ ಹೈವೇ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಪ್ರತಿಭಟನಾ ಕಾರರು ಮನವಿ ಪತ್ರವನ್ನು ಸಲ್ಲಿಸಿದರು. ನಂತರ ಹೋರಾಟಗಾರರು ಟೋಲ್ ಸಂಗ್ರಹವನ್ನು ತಡೆಯಲು ಮುಂದಾದಾಗ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಪ್ರಮುಖರನ್ನು ಬಂಧಿಸಿ ಬಿಡುಗಡೆ ಮಾಡಿದರು.
ಪ್ರತಿಭಟನೆಯಲ್ಲಿ ಕರವೇ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ನಿಂಗರಾಜಗೌಡ, ಜಿಲ್ಲಾಧ್ಯಕ್ಷ ಸುಜ್ಞಾನಮೂರ್ತಿ, ರಾಜ್ಯ ಉಪಾಧ್ಯಕ್ಷ ಸುರೇಶ್ ಗೌಡ್ರು, ಖಜಾಂಚಿ ಶ್ರೀಧರ್, ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜು, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸುವರ್ಣಮ್ಮ ದಾವಣಗೆರೆ ಇದ್ದರು.