ಬೆಂಗಳೂರು: ಹಾಸನ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ಘಟನೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುರುವಾರ “ಹೆಲ್ಮೆಟ್ ಧರಿಸಿ’ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಹೋದರ, ಸಚಿವ ಎಚ್.ಡಿ.ರೇವಣ್ಣ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಶಾಸಕ ಪ್ರೀತಂಗೌಡರ ಮನೆ ಮತ್ತು ಕುಟುಂಬ ಸದಸ್ಯರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಜನಪ್ರತಿನಿಧಿಗಳಿಗೆ ರಕ್ಷಣೆ ಕೊಡಲಾಗದ ಸರ್ಕಾರ, ಸಾರ್ವಜನಿಕರ ಅಭಿವೃದ್ಧಿ ಹೇಗೆ ಮಾಡುತ್ತದೆ.
ಹೀಗಾಗಿ ಕುಮಾರಸ್ವಾಮಿ ಅವರು ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಪಿ.ಎನ್.ಸದಾಶಿವ ಮಾತನಾಡಿ, ಹಾಸನದ ಗೂಂಡಾ ರಾಜಕೀಯದ ಭದ್ರ ಕೋಟೆಯನ್ನು ಬೇಧಿಸಿದ ಶಾಸಕ ಪ್ರೀತಂಗೌಡರನ್ನು ನಾಶ ಮಾಡಲು ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬ ಸದಸ್ಯರು ಸಿದತೆ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿಯೇ ಜೆಡಿಎಸ್ ಕಾರ್ಯಕರ್ತರ ಮೂಲಕ ಪ್ರೀತಂಗೌಡರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಒಬ್ಬ ಬಿಜೆಪಿ ಕಾರ್ಯಕರ್ತನನ್ನು ಗಾಯಗೊಳಿಸಿದ್ದಾರೆ ಎಂದು ಆರೋಪಿಸಿದರು.
ರಸ್ತೆ ತಡೆ, ಸಂಚಾರ ಅಸ್ತವ್ಯಸ್ತ: ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಮೈಸೂರು ಬ್ಯಾಂಕ್ ವೃತ್ತ ಸುತ್ತ-ಮುತ್ತ ಕೆಲ ಹೊತ್ತು ಸಂಚಾರ ದಟ್ಟಣೆ ಉಂಟಾಯಿತು. ಕೂಡಲೇ ಮಧ್ಯಪ್ರವೇಶಿದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರತಿಭಟನೆಯಲ್ಲಿ ನಗರ ಯುವ ಮೋರ್ಚಾ ಅಧ್ಯಕ್ಷ ಸಪ್ತಗಿರಿಗೌಡ, ಬೆಂಗಳೂರು ನಗರ ಜಿಲ್ಲೆ ಯುವ ಮೋರ್ಚಾ ಅಧ್ಯಕ್ಷ ನವೀನ್ ರೆಡ್ಡಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.