ಬೆಂಗಳೂರು: ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಸದಸ್ಯೆಯರು ಶುಕ್ರವಾರ ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ ನಡೆಸಿದರು.
ಫೆಡರೇಷನ್‌ನ ರಾಜ್ಯಾಧ್ಯಕ್ಷ ಎಚ್.ಕೆ.ರಾಮಚಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರ ಕೂಡಲೇ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಫೆಡರೇಷನ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಸಮ್ಮಿಶ್ರ ಸರ್ಕಾರ ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಲು ಹೊರಟಿದೆ. ಇದರಿಂದಾಗಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ, ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಿದರೆ ಸೂಕ್ತ ಎಂದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಿ ಪಠ್ಯಪುಸ್ತಕವನ್ನು ಒದಗಿಸಬೇಕು. ಅಲ್ಲದೆ ಫಲಾನುಭವಿ ಮಕ್ಕಳಿಗೆ ಸಮವಸ್ತ್ರ ಮತ್ತು ಶೂ ನೀಡಬೇಕು. ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಹಾಧನವನ್ನು ಹೆಚ್ಚಿಸುವಂತೆ ಆಗ್ರಹಿಸಿದರು.
ಕೇಂದ್ರ ಸರ್ಕಾರ ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರ ಸಹಾಯ ಧನ ಹೆಚ್ಚಳ ಸಂಬಂಧ ಭರವಸೆ ನೀಡಿತ್ತು. ಆದರೆ ಅದು ಕೇವಲ ಭರವಸೆ ಆಗಿ ಉಳಿದಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಸರ್ಕಾರ ಸರಿಯಾಗಿ ವೇತನ ನೀಡುತ್ತಿಲ್ಲ ಎಂದು ಟೀಕಿಸಿದರು.
ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಮುಂದಾಗಬೇಕು.ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ ರೂಪಿಸುವುದಾಗಿ ಎಚ್ಚರಿಸಿದರು.