ಕುಣಿಗಲ್: ತಾಲೂಕಿನ ಹುಲಿಯೂರುದುರ್ಗ ಹೋಬಳಿ ನಿಡಸಾಲೆ ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ್ ಅವರನ್ನು ಅಪಹರಣ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ತಾಲೂಕು ಜೆಡಿಎಸ್ ವತಿಯಿಂದ ಕುಣಿಗಲ್ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್ ನಿಂದ ತಾಲೂಕು ಕಚೇರಿವರೆಗೆ ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್, ಜಿ.ಪಂ ಮಾಜಿ ಅಧ್ಯಕ್ಷ ಡಾ.ರವಿ ಅವರ ನೇತೃತ್ವದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ, ಶಾಸಕ ಡಾ.ಹೆಚ್.ಡಿ.ರಂಗನಾಥ್ ವಿರುದ್ದ ದಿಕ್ಕಾರ ಕೂಗಿದರು.
ಜೆಡಿಎಸ್ ಅಧ್ಯಕ್ಷ ಬಿ.ಎನ್.ಜಗದೀಶ್ ಮಾತನಾಡಿ, ನಿಡಸಾಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕರ ಒಡೆತನದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಮುಚ್ಚಿ ಹಾಕಲು ಸಂಸದ ಡಿ.ಕೆ. ಸುರೇಶ್, ಡಾ.ಹೆಚ್.ಡಿ. ರಂಗನಾಥ್ ಅವರ ಕುಮ್ಮಕಿನಿಂದ ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ್ ಅವರನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿದರು.
ಮುಂದುವರೆದು ಶಾಸಕರು ಗೂಂಡಾ ಪ್ರವೃತ್ತಿಯನ್ನು ಕೈ ಬಿಡಬೇಕು, ಇಲ್ಲವಾದರೇ ಮುಂದಿನ ದಿನದಲ್ಲಿ ನಿಮ್ಮನೇ ಟಾರ್ಗೆಟ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಅಧಿಕಾರಿಗಳು ಶಾಸಕರು ಹೇಳಿದಂತೆ ಕೆಲಸ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳುಗೆಡುವುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿ.ಪಂ ಮಾಜಿ ಅಧ್ಯಕ್ಷ ಡಾ.ರವಿ ಮಾತನಾಡಿ, ಭ್ರಷ್ಟಾಚಾರಕ್ಕೆ ಕಾರಣವಾಗಿರುವ ನಿಡಸಾಲೆ ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ವಾರದ ಒಳಗೆ ಬದಲಾಯಿಸಬೇಕು. ಇಲ್ಲವಾದಲ್ಲಿ ಜೆಡಿಎಸ್ ಕಾರ್ಯಕರ್ತರು ಪಾದಯಾತ್ರೆ ಮೂಲಕ ಗ್ರಾಮಗಳಲ್ಲಿನ ಮನೆ ಮನೆಗೆ ತೆರಳಿ ಶಾಸಕರ ಭ್ರಷ್ಟಾಚಾರ, ಸ್ವಜನ ಪಕ್ಷಪಾತದ ಬಗ್ಗೆ ಜನ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಮನವಿ ಪತ್ರವನ್ನು ಸರ್ಕಲ್ ಸಿಪಿಐ ಗುರುಪ್ರಸಾದ್‌ಗೆ ಸಲ್ಲಿಸಿದರು. ಗ್ರಾ.ಪಂ ಅಧ್ಯಕ್ಷ ಎಡಿಯೂರು ದೀಪು, ಸದಸ್ಯ ತರಿಕೆರೆ ಪ್ರಕಾಶ್, ಪುರಸಭಾ ಮಾಜಿ ಅಧ್ಯಕ್ಷ ಕೆ.ಎಲ್.ಹರೀಶ್, ಸದಸ್ಯ ಶ್ರೀನಿವಾಸ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದರು.