ಬೀದರ: ಕಾರಂಜಾ ಜಲಾಶಯದಲ್ಲಿ ಭೂಮಿ, ಮನೆ ಕಳೆದುಕೊಂಡ ಸಂತ್ರಸ್ತರಿಗೆ ವೈಜ್ಞಾನಿಕ ಬೆಲೆಯ ಪರಿಹಾರ ನೀಡುವಂತೆ ಒತ್ತಾಯಿಸಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ವತಿಯಿಂದ ಗುರುವಾರ ನಗರದಲ್ಲಿ ಬ್ರಹತ್ ಪ್ರತಿಭಟನೆ ನಡೆಸಲಾಯಿತು.
ನ್ಯಾಯ ನೀಡುವಂತೆ ಅನೇಕ ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಅಲ್ಲದೆ, ಕಳೆದ ಆಗಸ್ಟನಲ್ಲಿ 71 ದಿನಗಳ ಕಾಲ ಅಹೋರಾತ್ರಿ ಧರಣಿ ನಡೆಸಿ ಸರ್ಕಾರದ ಗಮನ ಸೆಳೆದರೂ ಕೂಡ ಇಂದಿಗೂ ಯಾರೂ ಸಂತ್ರಸ್ತರಿಗೆ ನ್ಯಾಯ ಸಿಗುವಂತೆ ಮಾಡಿಲ್ಲ.
ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಸಚಿವರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು, ಉಪ ಚುನಾವಣೆ ನಂತರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ನಂತರ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಕೂಡ ಕಾರಂಜಾ ಸಂತ್ರಸ್ತರಿಗೆ ನ್ಯಾಯ ನೀಡುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಮುಖ್ಯಮಂತ್ರಿಗಳು 6 ತಿಂಗಳಿಂದ ಭರವಸೆಗಳನ್ನು ಮಾತ್ರ ನೀಡುತ್ತಿದ್ದು, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವ ಕಾರ್ಯ ಮಾಡುತ್ತಿಲ್ಲ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಇದೀಗ ನಡೆಯುತ್ತಿರುವ ಅಧಿವೇಶನದಲ್ಲಿ ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಘೊಷಣೆ ಮಾಡಬೇಕು. ಇಲ್ಲವಾದರೆ ಬೀದರ್ ಬಂದ್, ರಸ್ತೆ ತಡೆ ನಡೆಸುವುದಾಗಿ ಎಚ್ಚರಿಸಿದರು.
ಕಾರಂಜಾ ಜಲಾಶಯದಲ್ಲಿ ಭೂಮಿ ಕಳೆದುಕೊಂಡವರಿಗೆ ವೈಜ್ಞಾನಿಕ ದರ ಪ್ರತಿ ಎಕರೆಗೆ 20 ಲಕ್ಷ ರೂ. ಪರಿಹಾರ ಧನ ನೀಡಬೇಕು. ಒನ್ ಟೈಮ್ ಸೆಟಲ್‌ಮೆಂಟ್ ಮೂಲಕ ಬೇಡಿಕೆಗಳನ್ನು ಇತ್ಯರ್ಥ ಮಾಡಬೇಕು. ಹೇಮಾವತಿ ಜಲಾಶಯದ ಮಾದರಿಯಲ್ಲಿ ಕಾರಂಜಾ ಸಂತ್ರಸ್ತರಿಗೂ ಪ್ಯಾಕೇಜ್ ನೀಡಬೇಕು ಎಂದು ಅನೇಕರು ಒತ್ತಾಯಿಸಿದರು.
ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಕಾರ್ಯದರ್ಶಿ ನಾಗಶೆಟ್ಟೆಪ್ಪ ಹಚ್ಚಿ ರೇಕುಳಗಿ ಹಾಗೂ ವಿವಿಧ ಗ್ರಾಮಗಳ ಸಂತ್ರಸ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.