ಹಾವೇರಿ: ಬಂಜಾರ ಗುರುಪೀಠದ ಕುಮಾರ ಮಹಾರಾಜರ ಮೇಲೆ ಹಲ್ಲೆ ನಡೆಸಿ ಅವಾಚ್ಯವಾಗಿ ನಿಂದಿಸಿರುವ ಘಟನೆ ಖಂಡಿಸಿ, ಆರೋಪಿಗಳ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸ್ವಾಭಿಮಾನಿ ಬಂಜಾರ ಸಮಾಜದ ವತಿಯಿಂದ ಜಿಲ್ಲಾಡಳಿತದ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಸ್ಥಳೀಯ ಪುರಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಕಚೇರಿಗೆ ಬಂದು ತಲುಪಿತು.
ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ ಡಿ.ಆರ್. ಮಾತನಾಡಿ, ಜಿಲ್ಲೆಯ ಸವಣೂರು ತಾಲೂಕಿನ ಕೃಷ್ಣಾಪುರದ ಬಂಜಾರ ಗುರುಪೀಠದ ಬಳಿ ಮೇ 16ರಂದು ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ಯುವಕನಿಗೆ ಡಿಜೆ ಸೌಂಡ್ ಕಡಿಮೆಗೊಳಿಸು, ಪೂಜೆಗೆ ತೊಂದರೆ ಆಗುತ್ತದೆ ಎಂದು ಸ್ವಾಮೀಜಿ ತಿಳಿಹೇಳಿದ್ದಕ್ಕೆ ಅವರ ಮೇಲೆ ಹಲ್ಲೆ ನಡೆಸಿ ಅವಾಚ್ಯವಾಗಿ ನಿಂದಿಸಿದ್ದರು.
ಈ ಹಿನ್ನೆಲೆ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಇನ್ನೊಬ್ಬ ಪರಾರಿಯಾಗಿದ್ದಾನೆ. ಅವನನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯಲ್ಲಿ ಧರ್ಮಗುರುಗಳ ಮೇಲೆ ಹಲ್ಲೆ ನಡೆಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಲಾಗಿದೆ. ಕೂಡಲೇ ಕುಮಾರ ಮಹಾರಾಜರಿಗೆ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ರಾಜಕೀಯ ಒತ್ತಡಕ್ಕೆ ಮಣಿಯದೇ ಹಲ್ಲೆ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ತರಿಕೇರಿಯ ಮಂಜು ಮಹಾರಾಜರು ಮಾತನಾಡಿ, ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿಯೇ ಧರ್ಮ ಗುರುಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಮೇಲ್ವರ್ಗದ ಸಮಾಜದವರು ಹಿಂದುಳಿದ ಸಮಾಜದವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಂಜಾರ ಸಮಾಜ ಒಗ್ಗಟ್ಟಾಗಿದ್ದು, ಇಂತಹ ಘಟನೆಯನ್ನು ಸಹಿಸುವುದಿಲ್ಲ. ಹಲ್ಲೆ ನಡೆಸಿದ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಸಮಾಜದ ಮುಖಂಡ ತಿಪ್ಪೇಸ್ವಾಮಿ ಸೇರಿದಂತೆ ಇತರರು ಇದ್ದರು.