Advertisement

ಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

05:21 PM Mar 13, 2018 | Team Udayavani |

ಕಂಪ್ಲಿ: ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ಶುದ್ಧ ಕುಡಿಯುವ ನೀರು, ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ
ಸೇರಿದಂತೆ ಪಟ್ಟಣದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ( ಪ್ರೊ| ಕೃಷ್ಣಪ್ಪ ಸ್ಥಾಪಿತ)ಯ ಪದಾಧಿಕಾರಿಗಳು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. 

Advertisement

ಬಳಿಕ ಮಾತನಾಡಿದ ಸಮಿತಿ ಸಂಚಾಲಕ ಎ.ಲಕ್ಷ್ಮೀಪತಿ, ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಸುಮಾರು 11 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ ಕಳೆದ ವರ್ಷವೇ ನಾಲ್ಕನ್ನು ಕಂಪ್ಲಿ ಶಾಸಕ ಟಿ.ಎಚ್‌.ಸುರೇಶಬಾಬು ಉದ್ಘಾಟಿಸಿದ್ದಾರೆ. ಆದರೆ ಇದುವರೆಗೂ ಆರಂಭಿಸದೇ ಬೀಗ ಹಾಕಲಾಗಿದೆ. ಜನತೆ ಶುದ್ಧ ಕುಡಿಯುವ ನೀರಿನಿಂದ ವಂಚಿತರಾಗಿದ್ದಾರೆ. ಪುರಸಭೆಯವರು ಸರಬರಾಜು ಮಾಡುವ ಕುಡಿಯುವ ನೀರನ್ನು ಶುದ್ಧೀಕರಿಸದೇ
ಬಿಡುತ್ತಿರುವುದರಿಂದ ಸಾರ್ವಜನಿಕರು ಕುಡಿಯಲು ಯೋಗ್ಯವಾಗಿಲ್ಲ, ಇದರಿಂದ ಸಾರ್ವಜನಿಕರು ಅನೇಕ ರೋಗಗಳಿಂದ ಬಳಲುವಂತಾಗಿದೆ ಎಂದು ಆರೋಪಿಸಿದರು.

ಪಟ್ಟಣದ ವಿವಿಧ ವಾರ್ಡ್ಗಳಲ್ಲಿಯೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿದ್ದು, ಅವುಗಳನ್ನು ಆರಂಭಿಸಿಲ್ಲ
ಎಂದು ಆರೋಪಿಸಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಆರಂಭಿಸದೇ ಇರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದೆ. ಆಸ್ಪತ್ರೆಯಲ್ಲಿ ಸಮರ್ಪಕ ನೀರಿನ ಸೌಲಭ್ಯಗಳಿಲ್ಲದೆ ರೋಗಿಗಳು, ಬಾಣಂತಿಯರು, ನವಜಾತು ಶಿಶುಗಳು ನೀರಿಲ್ಲದೆ ಪರದಾಡುವಂತಾಗಿದೆ. ಪಟ್ಟಣದಲ್ಲಿ ಸಮರ್ಪಕವಾಗಿ ಬೀದಿ ದೀಪಗಳ ವ್ಯವಸ್ಥೆಗಳು ಇಲ್ಲದೇ ಇರುವುದರಿಂದ ಪಟ್ಟಣದಲ್ಲಿ ಸಂಚರಿಸುವುದು ದುಸ್ತರವಾಗಿದೆ.

ಪಟ್ಟಣದಲ್ಲಿ ಕಳ್ಳತನಗಳು ಅಧಿಕವಾಗಿದ್ದು, ಸಾರ್ವಜನಿಕರು ಭಯಪಡುವಂತಾಗಿದೆ ಎಂದು ದೂರಿದರು. ಮೂಲಭೂತ
ಸೌಕರ್ಯ ಒದಗಿಸಬೇಕು. ಇಲ್ಲದಿದ್ದರೆ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಹೇಳಿದರು. ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಾಧಿಕಾರಿ ಎಂ. ವಿಜಯಲಕ್ಷ್ಮೀ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸಂಘಟನೆಯ ಮುಖಂಡರಾದ ಕೆ.ರಾಜು, ಈರಣ್ಣ, ರಾಮಲ್ಲಿ, ಬಸವರಾಜ, ಪಿ.ಶಂಭೂಲಿಂಗ, ಪ್ರಸಾದ್‌, ಪ್ರಭಾಕರ್‌, ಎಸ್‌.ಸುರೇಶ್‌, ಎನ್‌.ಸುರೇಶ್‌, ರಾಮು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next