Advertisement

ಎಂಬಿಪಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

12:28 PM May 07, 2019 | Suhan S |
ಗದಗ: ಗೃಹ ಸಚಿವರ ದಬ್ಟಾಳಿಕೆ ನೀತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ರಾಜ್ಯ ಸರಕಾರದ ದಾಳಿ ಖಂಡಿಸಿ ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ಗೃಹ ಸಚಿವ ಎಂ.ಬಿ. ಪಾಟೀಲ ಹಾಗೂ ವಿಪಕ್ಷಗಳ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿರುವ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದರು.

Advertisement

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕರು, ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿರುವ ಬಿಜೆಪಿ ಹಿತೈಷಿಗಳು, ಪತ್ರಕರ್ತರನ್ನು ಕಾರಾಗೃಹಕ್ಕೆ ಕಳುಹಿಸಲು ಸ್ವತಃ ಗೃಹಮಂತ್ರಿ ಎಂ.ಬಿ. ಪಾಟೀಲ ಅವರು ವಿಶೇಷ ಆಸಕ್ತಿ ವಹಿಸಿದ್ದಾರೆ. ಮಹೇಶ್‌ ವಿಕ್ರಮ್‌ ಹೆಗಡೆ, ಶ್ರುತಿ ಬೆಳ್ಳಕ್ಕಿ, ಶಾರದಾ ಡೈಮಂಡ್‌, ಹೇಮಂತ್‌ಕುಮಾರ್‌ ಮತ್ತು ಅಜಿತ್‌ ಶೆಟ್ಟಿ ಹೇರಂಜಿ ಎಂಬುವರ ವಿರುದ್ಧ ದಾಖಲಾಗಿರುವ ಪ್ರಕರಣಗಳೇ ಇದಕ್ಕೆ ಉತ್ತಮ ಉದಾಹರಣೆಯಾಗಿವೆ. ಅಮಾಯಕರ ವಿರುದ್ಧ ಇಲ್ಲಸಲ್ಲದ ಪ್ರಕರಣಗಳನ್ನು ದಾಖಲಿಸಿ, ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗೃಹ ಸಚಿವ ಎಂ.ಬಿ. ಪಾಟೀಲ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕಳೆದ ಕೆಲ ತಿಂಗಳಿನಿಂದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಸಚಿವರು, ಶಾಸಕರು ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಒಂದಿಲ್ಲೊಂದು ರೀತಿಯಲ್ಲಿ ಸೇಡಿನ ರಾಜಕಾರಣ ಮಾಡಿದ್ದಾರೆ. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವಂತೆ ಕರೆ ನೀಡುವ ಮೂಲಕ ತಮ್ಮ ಗೂಂಡಾ ಪ್ರವೃತ್ತಿ ತೋರಿದ್ದಾರೆ. ನಟರಾದ ಯಶ್‌, ದರ್ಶನ ಅವರಿಗೆ ಜೆಡಿಎಸ್‌ ಶಾಸಕ ನಾರಾಯಣಗೌಡ ಅವರು ನೇರವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ರಾಜ್ಯ ಸಮ್ಮಿಶ್ರ ಸರಕಾರ ತುಟಿ ಬಿಚ್ಚುತ್ತಿಲ್ಲ ಎಂದು ಕಿಡಿಕಾರಿದರು.

ರಾಜ್ಯ ಸಮ್ಮಿಶ್ರ ಸರ್ಕಾರ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಾರ್ವಜನಿಕವಾಗಿ ಟೀಕಿಸುವವರ ವಿರುದ್ಧ ಪೊಲೀಸ್‌ ಪ್ರಕರಣಗಳನ್ನು ದಾಖಲಿಸುವ ಮೂಲಕ ಭಯದ ವಾತಾವರಣ ಸೃಷ್ಟಿಸುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಪತಿ ಉಡುಪಿ, ಶಹರ ಘಟಕದ ಅಧ್ಯಕ್ಷ ಜಗನ್ನಾಥಸಾ ಭಾಂಡಗೆ, ನಗರಸಭೆ ಮಾಜಿ ಸದಸ್ಯ ಅನಿಲ ಅಬ್ಬಿಗೇರಿ, ಪ್ರಮುಖರಾದ ಎಂ.ಎಸ್‌. ಕರಿಗೌಡ್ರ, ಬಿ.ಎಚ್. ಲದ್ವಾ, ಕಾಂತಿಲಾಲ್ ಬನ್ಸಾಲಿ, ಇರ್ಷಾದ್‌ ಮಾನ್ವಿ, ಅಶೋಕ ಸಂಕಣ್ಣವರ, ಬಿ.ಎಚ್. ಚಿಂಚಲಿ, ನಿಂಗಪ್ಪ ಮಣ್ಣೂರ, ಶಾರದಾ ಹಿರೇಮಠ, ರತ್ನಾ ದಾಸರ, ಪಾರ್ವತಿ ಪಟ್ಟಣಶೆಟ್ಟಿ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next