Advertisement

ರಾಷ್ಟ್ರೀಕೃತ ಬ್ಯಾಂಕ್‌ನ ಕೃಷಿ ಸಾಲಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ

01:00 PM Aug 22, 2017 | |

ಧಾರವಾಡ: ರಾಷ್ಟ್ರೀಕೃತ ಬ್ಯಾಂಕ್‌ನ ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರೈತ ಮತ್ತು ಹಸಿರು ಸೇನೆ ಹಾಗೂ ಕರ್ನಾಟಕ ಪ್ರಾಂತ ಸಂಘ-ರೈತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ನಗರದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು. 

Advertisement

ಕಳೆದ 2-3 ವರ್ಷದಿಂದ ರಾಜ್ಯದ ಬಹುತೇಕ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಬರಗಾಲ ಉಂಟಾಗಿದ್ದು, ರೈತ ಸಮುದಾಯ ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಕೃಷಿ ಸಾಲವನ್ನು ಮರುಪಾವತಿ ಮಾಡುವುದು ಅಸಾಧ್ಯದ ಮಾತಾಗಿದ್ದು, ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಂದು ಬಾರಿ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಲಾಯಿತು. 

ರೈತ ಸಂಘದ ರಾಜ್ಯ ಕಾರ್ಯದರ್ಶಿ ನಾಗಪ್ಪ ಉಂಡಿ ಮಾತನಾಡಿ, ರಾಜ್ಯ ಸರಕಾರ ಕೇವಲ ಸಹಕಾರಿ ಕ್ಷೇತ್ರದ 50 ಸಾವಿರ ರೂಪಾಯಿ ರೈತರ ಸಾಲಮನ್ನಾ ಮಾಡಿದೆ. ಆದರೆ, ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿರುವ ರೈತರ 52 ಸಾವಿರ ಕೋಟಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದರೂ ಸ್ಪಂದಿಸುತ್ತಿಲ್ಲ.

ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ರೈತ ವಿರೋಧಿ ನಿಲುವನ್ನು ತಾಳಿವೆ ಎಂದು ದೂರಿದರು. ಜಿಲ್ಲಾಧ್ಯಕ್ಷ ಬಿ.ಎಸ್‌. ಸೊಪ್ಪಿನ ಮಾತನಾಡಿ, ಬರದಿಂದ ತೀವ್ರಗೊಂಡಿರುವ ಕೃಷಿ ಬಿಕ್ಕಟ್ಟಿನ ಫಲವಾಗಿ ರೈತರ ಆತ್ಮಹತ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕೇಂದ್ರ ಸರಕಾರ ರೈತರ ಸಾಲಮನ್ನಾ ಅಸಾಧ್ಯ ಎಂಬುದಾಗಿ ಹೇಳುತ್ತಿರುವುದು ಖಂಡನೀಯ.

ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಲ್ಲಿ ಉದ್ಯಮಿದಾರರ ಹಾಗೂ ಕಾರ್ಪೋರೇಟ್‌ ಕಂಪನಿಗಳ 12 ಲಕ್ಷ ಕೋಟಿ ತೆರಿಗೆ ಮತ್ತು ಸಾಲಮನ್ನಾ ಮಾಡಿದೆ. ದೇಶಕ್ಕೆ ಅನ್ನ ನೀಡುವ ರೈತರ ಸಾಲವನ್ನು ಮನ್ನಾ ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. 

Advertisement

ಜಿಲ್ಲೆಯ ಕಲಘಟಗಿ ತಾಲೂಕುಗಳಲ್ಲಿ ನೂರಾರು ರೈತರು ಸರಕಾರಿ ಜಮೀನುಗಳಲ್ಲಿ 40-50 ವರ್ಷಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುವರಿಗೆ ಹಕ್ಕುಪತ್ರ ನೀಡಬೇಕು. ಮುಂಗಾರು ಕೈಕೊಟ್ಟಿದ್ದರಿಂದ ಉದ್ಯೋಗವಿಲ್ಲದೆ ರೈತರು ವಲಸೆ ಹೋಗುತ್ತಿದ್ದಾರೆ. ರೈತರಿಗೆ, ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು. 

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಈರಣ್ಣ ಬಡಿಗೇರ, ಪ್ರಧಾನ ಕಾರ್ಯದರ್ಶಿ ಕೆ.ಎಚ್‌. ಪಾಟೀಲ, ಎಚ್‌.ಜಿ. ದೇಸಾಯಿ, ಶಿವಶರಣ ಗೋನಾಳ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.  

Advertisement

Udayavani is now on Telegram. Click here to join our channel and stay updated with the latest news.

Next