ಔರಾದ: ಎಕಂಬಾ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸುವಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ಗ್ರಾಮದಲ್ಲಿ ಉದಗೀರ-ಔರಾದ ಅಂತಾರಾಜ್ಯ ಹೆದ್ದಾರಿ ತಡೆ ಪ್ರತಿಭಟನೆ ನಡೆಸಿದರು.
ಎರಡು ದಿನಗಳಲ್ಲಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಎಂ.ಚಂದ್ರಶೇಖರ್ ಕುಡಿಯುವ ನೀರಿನ ಸಮಸ್ಯೆಯನ್ನು ಎರಡು ದಿನಗಳಲ್ಲಿ ಬಗೆ ಹರಿಸಲಾಗುವುದು. ಗ್ರಾಮ ಪಂಚಾಯಿತಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಜಿಪಂ ಸಿಇಒಗೆ ಮನವಿ ಮಾಡುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂದೆ ಪಡೆಯಲಾಯಿತು. ಅಮೀತ ಹಂಗರಗೆ, ಜ್ಞಾನೇಶ್ವರ ಅಶೋಕರಾವ್, ನರಸಿಂಗ್ ಬಿರಾದಾರ, ಸಂದೀಪ ಉಪಾಸೆ, ಗೋರಕ್ ಹಳ್ಳೆ ಹಾಗೂ ಗ್ರಾಮಸ್ಥರು ಪ್ರತಿಭಟನೆಯ ಪಾಲ್ಗೊಂಡಿದ್ದರು.
Advertisement
ಕುಡಿಯುವ ನೀರು ಪೂರೈಸಬೇಕೆಂದು ಅಧಿಕಾರಿಗಳಿಗೆ ಈ ಹಿಂದೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದೇವೆ. ಅಲ್ಲದೆ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ಮನೆಗಳು ಮಂಜೂರಾದಾಗ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಪಂ ಸದಸ್ಯರು ಫಲಾನುಭವಿಗಳಿಂದ ಹಣ ಪಡೆಯುತ್ತಿದ್ದಾರೆ. ಗ್ರಾಪಂನಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಗ್ರಾಮದ ಮುಖಂಡ ಸತೀಷ ವಾಸರೆ ಆಕ್ರೋಶ ವ್ಯಕ್ತಪಡಿಸಿದರು.