ಹಾವೇರಿ: ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡಲು ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಶಿಕ್ಷಣ ಸರ್ವರಿಗೂ ಸಿಗಬೇಕಾಗಿರುವ ಅಮೂಲ್ಯ ಸಂಪತ್ತು. ಇಲ್ಲಿ ಯಾವುದೇ ಜಾತಿ, ಮತ, ಬಡವ ಮತ್ತು ಶ್ರೀಮಂತ ಎನ್ನುವ ಭಾವನೆ ಮೂಡದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರ್ಕಾರದ್ದಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ನೀಡಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿ ಮುಖಂಡರು ಒತ್ತಾಯಿಸಿದರು.
2018-19ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಸೇರಿದಂತೆ, ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ, ಇವತ್ತಿನವರೆಗೂ ಆ ಯೋಜನೆ ಜಾರಿಗೆ ಬಾರದಿರುವುದು ರಾಜ್ಯ ಸರ್ಕಾರದ ವಿದ್ಯಾರ್ಥಿಗಳ ಮೇಲಿನ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.
ರಾಜ್ಯವು ಬರಗಾಲ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯದ ರೈತಾಪಿ ಕುಟುಂಬಗಳು ಸಂಕಷ್ಟದಲ್ಲಿವೆ. ಇಂದಿನ ಖಾಸಗಿ ಕಾಲೇಜುಗಳ ಡೋನೆಶನ್ ಹಾವಳಿಯಿಂದ ರಾಜ್ಯದ ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇಂತಹ ದಿನಗಳಲ್ಲಿ ಹೆಚ್ಚಾಗಿ ಬಸ್‌ಪಾಸ್ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರೇ ಆಗಿದ್ದು ರಾಜ್ಯದಲ್ಲಿನ ಎಲ್ಲ ವರ್ಗದ, ಎಲ್ಲ ಸ್ತರದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿದರು.
ಹಳ್ಳಿಗಳಿಂದ ತಾಲೂಕು-ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಿಸುವುದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ. ಕಳೆದ ವರ್ಷ ಹಣವಿಲ್ಲವೆಂಬ ನೆಪವೊಡ್ಡಿದ ಕರ್ನಾಟಕ ರಾಜ್ಯ ಸರ್ಕಾರ, ಈ ವರ್ಷವು ಕೂಡ ವಿದ್ಯಾರ್ಥಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡಿದೆ. ಕೇವಲ ಅಧಿಕಾರ ಉಳಿಸಿಕೊಳ್ಳುವ ಯೋಚನೆಯಲ್ಲಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಸಂಕಷ್ಟ ಅರಿಯಬೇಕು. ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಇಲ್ಲವಾದರೆ ಮುಂದಿನ ದಿನಮಾನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಮೇಘನಾಥ, ವಿಶ್ವನಾಥ, ಪವನ್ ಬೊಮ್ಮಣ್ಣನವರ, ಗಂಗಾಧರ, ಕಿರಣ, ಪ್ರಶಾಂತ, ವೀಣಾ ಪಾಟೀಲ, ತೇಜಸ್ವಿನಿ, ಐಶ್ವರ್ಯ ಎಂ., ಮಲ್ಲಿಕಾರ್ಜುನ ಹಾಗೂ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಇದ್ದರು.