Advertisement

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

08:59 PM Oct 23, 2021 | Team Udayavani |

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಶುಕ್ರವಾರ ಕಿಮ್ಸ್‌ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು. ಕೊರೊನಾ 2ನೇ ಅಲೆಗೆ ತತ್ತರಿಸಿದ್ದ ರಾಜ್ಯ ಹಂತ ಹಂತವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.

Advertisement

ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳೆಲ್ಲವೂ ಮರು ಪ್ರಾರಂಭವಾಗಿವೆ. ಆದರೆ ಭೌತಿಕ ತರಗತಿಗಳು ಆರಂಭಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಅದರ ಪರಿಹಾರಕ್ಕೆ ಸರಕಾರ ಮುಂದಾಗಬೇಕೆಂದು ಒತ್ತಾಯಿಸಲಾಯಿತು.

ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲ ಗ್ರಾಮಗಳಿಗೂ ಬಸ್‌ ಸೇವೆ ಪುನರಾರಂಭಿಸಿಸಬೇಕು. ಲಾಕ್‌ಡೌನ್‌ ಕಾರಣ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಪುನರಾರಂಭವಾಗಿಲ್ಲ. ಇದರಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರ ತೊಂದರೆಯಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳು ಬಸ್‌ ಪಾಸ್‌ ಪಡೆಯಲು ಅರ್ಜಿ ಸಲ್ಲಿಸಿದರೂ ಸಿಬ್ಬಂದಿ ಕೊರತೆಯಿಂದಾಗಿ ವಿಳಂಬ ಆಗುತ್ತಿದೆ.

ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಬೇಕು. ಡಿಪ್ಲೊಮಾ ಎಂಜಿನಿಯರಿಂಗ್‌, ಸ್ನಾತಕ-ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿಎಚ್‌ಡಿ ಮಾಡುತ್ತಿರುವ ಪಜಾ, ಪಪಂ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಪಡೆಯದೇ ಪರದಾಡುವಂತಾಗಿದೆ. ರಾಜ್ಯ ಸರಕಾರ ಈ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ ವಿದ್ಯಾರ್ಥಿ ವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಬೇಕು. ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನದ ಮೊತ್ತ ಹೆಚ್ಚಿಸಬೇಕು. ವಸತಿ ನಿಲಯಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರಸ್ತೆ ತಡೆ ನಡೆಸಲು ಮುಂದಾದ ಎಬಿವಿಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯ ಮಾತಿನ ಚಕಮಕಿ ನಡೆಯಿತು. ರಾಜ್ಯ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ, ಸೋಮು ಪಾಟೀಲ, ರಾಕೇಶ ಕರ್ಜಗಿ, ದರ್ಶನ, ಶಿವಕುಮಾರ ಮಟ್ಟಿ, ರಮೇಶ ಲೋಂಡೆ, ಕಾವ್ಯಾ ಜೋಶಿ, ಭವಾನಿ ರಜಪೂತ, ನಿಶಾ, ಸುಶೀಲ, ನವೀನ ಇನ್ನಿತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next