ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿಯಲ್ಲಿಯೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಉಳಿಸಿಕೊಡಬೇಕೆಂದು ಒತ್ತಾಯಿಸಿ ತೆರಕಣಾಂಬಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ರೈತ ಮುಖಂಡರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಕಳೆದ ಒಂದು ತಿಂಗಳಿನಿಂದ ಕಾಲೇಜು ಉಳಿಸಿಕೊಳ್ಳಲು ಹೋರಾಟ ನಡೆಸಿದ್ದ ವಿದ್ಯಾರ್ಥಿಗಳು ಹಾಗೂ ರೈತ ಸಂಘಟನೆಯವರು ಬೆಂಗಳೂರಿಗೆ ತೆರಳಿ ಮೌರ್ಯ ಸರ್ಕಲ್‌ನಲ್ಲಿ ಕುಳಿತು ಕೆಲಕಾಲ ರಸ್ತೆ ತಡೆದು ಪ್ರತಿಭಟಿಸಿ ಗಮನ ಸೆಳೆದರು.
ವಿಷಯ ತಿಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಗೃಹ ಕಚೇರಿಗೆ ಹಸಿರು ಸೇನೆ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ಮಹೇಶ್ ಪ್ರಭು,ಬಸವಣ್ಣ, ಶಾಂತಮಲ್ಲಪ್ಪ, ಶಿವಪುರ ಮಹದೇವಪ್ಪ, ವಿದ್ಯಾರ್ಥಿಗಳಾದ ರಕ್ಷಿತಾ, ತೇಜಸ್ವಿನಿ ಅವರನ್ನು ಕರೆಸಿಕೊಂಡು ಗ್ರಾಮದಲ್ಲಿ ಕಾಲೇಜು ಉಳಿಸುವ ಭರವಸೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಗ್ರಾಮದಲ್ಲಿ 2014ರಲ್ಲಿ ಪ್ರಥಮ ದರ್ಜೆ ಕಾಲೇಜು ಆರಂಭವಾಗಿದ್ದರೂ ಕಳೆದ ವರ್ಷ ನೂತನ ಕಟ್ಟಡ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳ ಕೊರತೆಯ ಕಾರಣದಿಂದ ಸರ್ಕಾರ ಕಾಲೇಜನ್ನು ಬೆಳಗಾವಿ ಜಿಲ್ಲೆಗೆ ಸ್ಥಳಾಂತರಿಸಿ ಆದೇಶ ಹೊರಡಿಸಿತ್ತು. ಇದೇ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ ತೆರೆಯಲು ನಿರ್ಧರಿಸಲಾಗಿತ್ತು.
ಇದರಿಂದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ರಾಮೀಣ ಪ್ರದೇಶಗಳ ಹೆಣ್ಣುಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗುವ ಭೀತಿ ಎದುರಾಗಿತ್ತು. ಗ್ರಾಮದಲ್ಲಿ ಕಾಲೇಜು ಉಳಿಸುವಂತೆ ವಿದ್ಯಾರ್ಥಿಗಳು, ಪಾಲಕರು ಹಾಗೂ ರೈತ ಸಂಘಟನೆಯವರು ಹೋರಾಟ ನಡೆಸಿದ್ದರು. ಅಲ್ಲದೇ ಕಳೆದ 15 ದಿನಗಳ ಹಿಂದೆ ಉನ್ನತ ಶಿಕ್ಷಣ ಸಚಿವ ಉಪಮುಖ್ಯಮಂತ್ರಿ ಅಶ್ವತ್ಥ್
ನಾರಾಯಣ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಯಾವುದೇ ಉಪಯೋಗವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರೈತಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಶಿಕ್ಷಣ ಮಂತ್ರಿ ಸುರೇಶ್‌ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.