Advertisement
ನಗರದ ಚನ್ನಮ್ಮ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದ ರೈತರು ನಂತರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರು ನೀಡಿರುವ ಆದೇಶ ಅವೈಜ್ಞಾನಿಕ ಎಂದು ಟೀಕಿಸಿದರು.
Related Articles
Advertisement
ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಭೀಕರ ಬರಗಾಲದಿಂದ ಜನ, ಜಾನುವಾರುಗಳಿಗೆ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಘಟಪ್ರಭಾ ನದಿ ತೀರದ ಗ್ರಾಮಸ್ಥರ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಘಟಪ್ರಭಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗೆ ತಕ್ಷಣವೇ ನೀರು ಬಿಡುಗಡೆ ಮಾಡಬೇಕು ಎಂದರು.
ಜಿಲ್ಲಾ ಪಂಚಾಯತ್ ಸದಸ್ಯ ಗೋವಿಂದ ಕೊಪ್ಪದ ಮೊದಲಾದವರು ಮಾತನಾಡಿ, ಗೋಕಾಕ ಮತ್ತು ಮೂಡಲಗಿ ತಾಲೂಕಿನ ಜನತೆ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಸಚಿವ ಡಿ.ಕೆ.ಶಿವಕುಮಾರ ನೀರಿನ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಇಲ್ಲಿಯ ಜನರ ಬಗ್ಗೆ ಕಾಳಜಿ ಇದ್ದರೆ ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿಸಲಿ. ಅದಕ್ಕೆ ನಮ್ಮ ಅಭ್ಯಂತರ ಇಲ್ಲ ಎಂದು ಹೇಳಿದರು.
ಈ ಭಾಗದ ರೈತರ ಪರವಾಗಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಒಬ್ಬರೇ ಧ್ವನಿ ಎತ್ತಿದ್ದಾರೆ. ಅವರು ಪ್ರತಿನಿತ್ಯ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗೆ ಭೇಟಿ ನೀಡಿ ರೈತರಿಗೆ ನೀರು ಮುಟ್ಟಿಸುವಲ್ಲಿ ಶ್ರಮಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.
ಘಟಪ್ರಭಾ ನೀರು ಬಳಕೆದಾರರ ಮಹಾಮಂಡಳ ಅಧ್ಯಕ್ಷ ಅಶೋಕ ಕಂಡ್ರಟ್ಟಿ, ಬಸವಂತ ಕಮತಿ, ರೈತ ಮುಖಂಡ ಭೀಮಸಿ ಗದಾಡಿ, ಗಣಪತಿ ಇಳಿಗೇರಿ, ವಿಠuಲ ಪಾಟೀಲ, ಮಹಾದೇವ ತಾಂಬಡೆ, ಲಕ್ಷ್ಮಣ ನೀಲನ್ನವರ, ಸಿದ್ದಪ್ಪ ಹಮ್ಮನವರ, ರಾಮಯ್ಯ ಮಠದ, ಮಹಾದೇವ ತುಕ್ಕಾನಟ್ಟಿ, ಸುಭಾಷ ಹಾವಾಡಿ, ರಾಜು ಬೈರಗೋಳ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.