ಉಡುಪಿ: ರಾಜ್ಯದಲ್ಲಿ ಹಿಂದುಳಿದ ವರ್ಗದವರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಒಂದು ವಾರದೊಳಗೆ ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ರಾಜ್ಯದ ಹಿಂದುಳಿದ ವರ್ಗದ ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.
ಉಡುಪಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು, ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳನ್ನು ದಾಖಲಿಸಿ ಕೊಳ್ಳಲು ಕ್ರಮ ತೆಗೆದುಕೊಳ್ಳಬೇಕು ಮತ್ತು ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ 2,400ಕ್ಕೂ ಅಧಿಕ ಒಬಿಸಿ ಹಾಸ್ಟೆಲ್‌ಗಳಿದ್ದು 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಪ್ರವೇಶ ಅರ್ಜಿ ಬರುತ್ತದೆ. ಹಾಸ್ಟೆಲ್ ಕೊರತೆಯಿಂದ ಬಿಜೆಪಿ ಸರಕಾರ ಇದ್ದಾಗ ಆರ್ಥಿಕ ಇಲಾಖೆಯ ಅನುಮತಿ ಪಡೆದು 30 ಸಾವಿರ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಅವಕಾಶ ಕಲ್ಪಿಸಲಾಗಿತ್ತು. ರಾಜ್ಯ ಸರಕಾರ ತತ್‌ಕ್ಷಣವೇ ಆರ್ಥಿಕ ಇಲಾಖೆಯ ಅನುಮತಿ ಪಡೆದು ಹೆಚ್ಚುವರಿ ವ್ಯವಸ್ಥೆಯಡಿ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ದೀನದಯಾಳ್ ಅವರ ಹೆಸರಿನಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು ಹಾಗೂ ಮೈಸೂರಿನಲ್ಲಿ ತಲಾ 1 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹಾಸ್ಟೆಲ್ ಸಂಕೀರ್ಣ ನಿರ್ಮಾಣಕ್ಕೆ ಅವಕಾಶ ಮಾಡಲಾಗಿತ್ತು. ಅದರ ಕಾರ್ಯವನ್ನು ವೇಗಗೊಳಿಸಬೇಕು. ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಿಂದುಳಿದ ವರ್ಗದ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ನೀಡುವ ಯೋಜನೆಯನ್ನು ತತ್‌ಕ್ಷಣವೇ ಅನುಷ್ಠಾನ ಮಾಡಬೇಕು. ಹಿಂದುಳಿದ ವರ್ಗಗಳ ಭವನಕ್ಕೆ ಮಂಜೂರಾಗಿರುವ 100 ಕೋ.ರೂ. ಕೂಡಲೇ ಬಿಡುಗಡೆ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿಯವರಿಗೂ ಪತ್ರ ಬರೆಯಲಾಗಿದೆ ಎಂದರು.