ನರಗುಂದ: ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ಹಾಗೂ ದುಷ್ಕರ್ಮಿಗಳನ್ನು ಬಂಧಿಸಿ ಗಲ್ಲು ಶಿಕ್ಷೆಗೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕ ಸೇರಿದಂತೆ ತಾಲೂಕಿನ ಎಲ್ಲ ಹಿಂದು ಪರ, ರೈತ ಪರ, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ನರಗುಂದ ಬಂದ್ ಮಾಡಲಾಯಿತು.
ಬೆಳಗ್ಗೆಯಿಂದಲೇ ಬಂದ್ ಕರೆ ಬೆಂಬಲಿಸಿ ಪಟ್ಟಣದಲ್ಲಿ ಎಲ್ಲ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಸ್ಥರು ಬೆಂಬಲ ಸೂಚಿಸಿದರು. ಅಭಾವಿಪ ತಾಲೂಕು ಘಟಕದ ನೂರಾರು ವಿದ್ಯಾರ್ಥಿಗಳು, ರೈತ ಮುಖಂಡರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಿದರು.
ಪಟ್ಟಣದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಶಿವಾಜಿ ವೃತ್ತದಲ್ಲಿ ಧರಣಿ ನಡೆಸಿದ್ದಲ್ಲದೇ ವಿವಿಧ ಮಠಾಧೀಶರ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಸಿ ತಪ್ಪಿತಸ್ಥರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಹಾಗೂ ಡಿವೈಎಸ್‌ಪಿ ಶಂಕರ ರಾಗಿ ಅವರಿಗೆ ಮನವಿ ಸಲ್ಲಿಸಲಾಯಿತು. ಅಭಾವಿಪ ರಾಜ್ಯ ಕಾರ್ಯದರ್ಶಿ ಪ್ರತೀಕ್ ಮಾಳಿ, ಹಿಂದು ಸಂಘಟನೆ ಮುಖಂಡ ಹನಮಂತ ಮಳಲಿ ಮಾತನಾಡಿ, ಘಟನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳೀಯ ವಿರಕ್ತಮಠದ ಶ್ರೀ ಶಿವಕುಮಾರ ಸ್ವಾಮೀಜಿ, ಪಂಚಗ್ರಹ ಗುಡ್ಡದ ಹಿರೇಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯರು ವೇದಿಕೆಯಲ್ಲಿದ್ದರು. ಪ್ರತಿಭಟನೆಯಲ್ಲಿ ಎಲ್ಲ ಸಂಘಟನೆಗಳ ಮುಖಂಡರು, ಕನ್ನಡಪರ ಹೋರಾಟಗಾರರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ಘಟನೆ ವ್ಯಾಪಕವಾಗಿ ಖಂಡಿಸಿದರು. ಹೆದ್ದಾರಿ ಸಂಚಾರ ಬಂದ್: ನರಗುಂದ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಪಟ್ಟಣ ಬಿಕೋ ಎನ್ನುತ್ತಿತ್ತು. ರಾಷ್ಟ್ರೀಯ ಹೆದ್ದಾರಿ ವಾಹನಗಳ ಸಂಚಾರ ಸ್ಥಗಿತಗೊಂಡಿದ್ದರಿಂದ ಎರಡೂ ಕಡೆಗೆ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ಪರದಾಡಿದ ಪ್ರಸಂಗ ಜರುಗಿತು.