ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದ ಸಂಬಾಲ್ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಸರ್ಕಾರಿ ಬಸ್ ಗಳಿಗೆ ಬೆಂಕಿ ಹಚ್ಚಲಾಗಿದ್ದು, ಹಲವು ಪತ್ರಕರ್ತರ ಮೇಲೆ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ ಎಂದು ವರದಿ ತಿಳಿಸಿದೆ.
ಕಳೆದ ರಾತ್ರಿಯೇ ಉತ್ತರಪ್ರದೇಶದಾದ್ಯಂತ ಸೆಕ್ಷನ 144 ಜಾರಿಗೊಳಿಸಲಾಗಿತ್ತು. ಆದರೂ ನಿಷೇಧಾಜ್ಞೆ ಉಲ್ಲಂಘಿಸಿ ಸಾವಿರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ನಾಲ್ಕು ಬಸ್ ಗಳನ್ನು ಹಾಗೂ ಪೊಲೀಸ್ ವಾಹನಗಳನ್ನು ಜಖಂಗೊಳಿಸಿದ್ದಾರೆ ಎಂದು ವರದಿ ವಿವರಿಸಿದೆ.
ಸೆಕ್ಷನ್ 144 ಜಾರಿಗೊಳಿಸಿದ್ದರು ಸಮಾಜವಾದಿ ಪಕ್ಷ ಗುರುವಾರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಕರೆ ನೀಡಿತ್ತು. ಸಂಬಾಲ್ ನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಬಸ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡುತ್ತಿರುವುದಾಗಿ ವರದಿ ತಿಳಿಸಿದೆ.
ಡಿಸೆಂಬರ್ 19ರಂದು ಪ್ರತಿಭಟನೆ ನಡೆಸಲು, ಜನರು ಒಗ್ಗೂಡಲು ಯಾವುದೇ ಅನುಮತಿ ನೀಡಿಲ್ಲ. ಜನರು ಇಂತಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಾರದು. ಅಲ್ಲದೇ ಮಕ್ಕಳು ಕೂಡಾ ಪಾಲ್ಗೊಳ್ಳದಂತೆ ಪೋಷಕರು ಸಲಹೆ ನೀಡಬೇಕು ಎಂದು ಡಿಜಿಪಿ ಓಪಿ ಸಿಂಗ್ ಟ್ವೀಟ್ ನಲ್ಲಿ ವಿನಂತಿಸಿಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಿಲ್ಲಿ, ಬೆಂಗಳೂರು ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಇತಿಹಾಸಕಾರ ರಾಮಚಂದ್ರ ಗುಹಾ, ವಾಟಾಳ್ ನಾಗರಾಜ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.