ಶಿವಮೊಗ್ಗ: ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ದರ ಏರಿಕೆ ವಿರೋ ಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಶನಿವಾರ ಮಹಾವೀರ ವೃತ್ತದಲ್ಲಿ ಬೈಕಿಗೆ ಛಟ್ಟ ಕಟ್ಟಿ ಅಣಕು ಪ್ರದರ್ಶನದ ಮೂಲಕ ವಿಭಿನ್ನ ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸೇರಿದಂತೆ ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ತಡೆಯುವಲ್ಲಿವಿಫಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ ಮಧ್ಯಮ ವರ್ಗದ ಜನ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ದರ ಕಡಿಮೆಯಾಗಿದ್ದರೂ ಕೂಡ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಬೆಲೆ ಏರಿಕೆ ಮಾಡುತ್ತಿದೆ. ಕೇಂದ್ರ ಸರ್ಕಾರ ಜನ ಸಾಮಾನ್ಯರ ನೋವುಗಳಿಗೆ ಸ್ಪಂದಿಸುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದರೂ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿಲ್ಲ. ಉದ್ಯೋಗ ಸೃಷ್ಟಿಯಲ್ಲಿಯೂ ವಿಫಲವಾಗಿದೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದ ಬಿಜೆಪಿ ಮೋಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಅಸಿಟೈಲಿನ್ ಅನಿಲದಿಂದ ದ್ವಿಚಕ್ರ ವಾಹನ ಚಾಲನೆ ಆವಿಷ್ಕಾರ
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜನ ಜೀವನ ನಡೆಸುವುದೇ ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಬಡ ಜನರಿಗೆ ನೆರವು ನೀಡಬೇಕಿದ್ದ ಸರ್ಕಾರ ಜನರಿಂದಲೇ ಹಣ ಕಸಿದುಕೊಳ್ಳುವ ಪ್ರಯತ್ನ ನಡೆಸುತ್ತಿದೆ. ಇದೇನಾ ಕೇಂದ್ರ ಸರ್ಕಾರದ ಅಚ್ಛೇ ದಿನ್ ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಜಿಲ್ಲಾಧ್ಯಕ್ಷ ಎಚ್.ಎಸ್. ಬಾಲಾಜಿ, ಯುವ ಮುಖಂಡ ಸಿ.ಜಿ. ಮಧುಸೂದನ್, ಮಹಮ್ಮದ್ ನಿಹಾಲ್, ಎನ್‌ಎಸ್‌ಯುಐ ಕಾರ್ಯಾಧ್ಯಕ್ಷ ರವಿಕುಮಾರ್, ವಿಜಯ್, ವಿನಯ್ ತಾಂಡ್ಲೆ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.