ಬೆಂಗಳೂರು: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ರಾಜ್ಯಸರ್ಕಾರ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಆಗ್ರಹಿಸಿ ಅ.25ರಿಂದ ರಾಜ್ಯಾದ್ಯಂತ ಪ್ರತಿಭಟನಾ ಧರಣಿ ನಡೆಸಲು ಸಮಾನ ಮನಸ್ಕ ದಲಿತ ಸಂಘಟನೆಗಳ ನಿರ್ಧಾರ ಕೈಗೊಂಡಿವೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದಸಂಸ ಅಧ್ಯಕ್ಷ ಎನ್.ಮೂರ್ತಿ ಮಾತನಾಡಿ, ಪರಿಶಿಷ್ಟರಿಗೆ ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ನೀಡಿ 6 ವರ್ಷಗಳು ಕಳೆಯುತ್ತಿದೆ. ಆದರೆ, ಸರಕಾರಗಳ ನಿರ್ಲಕ್ಷ್ಯದಿಂದ ಇದುವರೆಗೂ ಜಾರಿಯಾಗಿಲ್ಲ. ಹೀಗಾಗಿ, ಕೂಡಲೇ ಇದನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನಾ ಧರಣಿ ನಡೆಸಲಾಗುತ್ತಿದೆ ಎಂದರು.
ಈ ಸಲುವಾಗಿ ರಾಜ್ಯಸರ್ಕಾರ ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ, ಅಂಗೀಕಾರ ಪಡೆದು, ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು. ಇಲ್ಲದಿದ್ದರೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜೊತೆಗೆ ಕಾಂತರಾಜ್ ಆಯೋಗದ ವರದಿ ಅನುಷ್ಠಾನಗೊಳಿಸಿ, ಎಲ್ಲಾ ಜಾತಿಗಳಿಗೆ ಆಯಾ ಜಾತಿಯ ಜನಸಂಖ್ಯೆ ಆಧಾರಿತ ಜಾತಿವಾರು ಮೀಸಲಾತಿ ಕಲ್ಪಿಸಬೇಕು. ಪರಿಶಿಷ್ಟ ನೌಕರರ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ವಿರುದ್ಧವಾಗಿ ಸುಗ್ರೀವಾಜ್ಞೆ ಹೊರಡಿಸಬೇಕು. ಬಗರ್ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಬೇಕು ಎಂದು ರಾಜ್ಯಸರ್ಕಾರಕ್ಕೆ ಆಗ್ರಹಿಸಿದರು.
ಮಾದಿಗ ಸಂಘಟನೆಗಳ ಒಕ್ಕೂಟದ ಸಂಚಾಲಕ ಜೆ.ಸಿ.ಪ್ರಕಾಶ್, ಮಾದಿಗ ದಂಡೋರದ ಎಂ.ನಾರಾಯಣಸ್ವಾಮಿ, ಆದಿಜಾಂಭವ ಸಂಘದ ಸಿ.ಪಿ.ರಮೇಶ್‌ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.