ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾಬುಡನ್‌ಗಿರಿ ದರ್ಗಾದಲ್ಲಿ ಮಾ.22 ರಿಂದ ಮಾ.24 ರವರೆಗೆ 3 ದಿನಗಳ ಕಾಲ ನಡೆಯುವ ಉರುಸ್ ಆಚರಣೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ|ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉರುಸ್ ಆಚರಣೆ ಸಂಬಂಧ ಕೈಗೊಂಡಿರುವ ಸಿದ್ಧತೆಗಳ ಕುರಿತು ಕರೆಯಲಾಗಿದ್ದ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪದವಾಗದಂತೆ ಪೊಲೀಸ್ ಬಂದೋಬಸ್ತ್ ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದ ಅವರು, ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ, ರಸ್ತೆಗಳನ್ನು ದುರಸ್ಥಿಪಡಿಸುವಂತೆ ಲೋಕೋಪಯೋಗಿ ಇಲಾಖೆ, ಮಾಣಿಕ್ಯಧಾರ ಹಾಗೂ ಗಾಳಿಕೆರೆಗೆ ತೆರಳುವ ರಸ್ತೆ ದುರಸ್ಥಿಪಡಿಸುವಂತೆ ಪಂಚಾಯತ್ ರಾಜ್ ಇಂಜಿನಿಯರ್‌ಗಳಿಗೆ ಸೂಚಿಸಿದರು.
ಭಕ್ತಾದಿಗಳ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸಲಾಗುವುದು, ತಾತ್ಕಾಲಿಕ ಆಸ್ಪತ್ರೆ ತೆರೆಯಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೇಳಿದರು.
ಉರುಸ್‌ಗೆ ಬರುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡುವಂತೆ ಹಾಗೂ 15 ದಿನಗಳ ಕಾಲ ಭಕ್ತರಿಗೆ ಗಂಜಿ ವಿತರಿಸುವಂತೆ ಮುಜರಾಯಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿಗೆ ತಿಳಿಸಿ, ಸಂಸ್ಥೆಯ ಸುತ್ತಮುತ್ತ ಸ್ವತ್ಛತೆ ಕಾಪಾಡುವಂತೆ, ಭಕ್ತಾದಿಗಳ ವಾಸ್ತವ್ಯಕ್ಕೆ ಮೂರು ದಿನಗಳ ಕಾಲ ತಾತ್ಕಾಲಿಕ ಶೇಡ್ ನಿರ್ಮಿಸುವಂತೆ ಹೇಳಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ, ಅಪರ ಜಿಲ್ಲಾಧಿಕಾರಿ ಡಾ|ಕುಮಾರ್, ಉಪವಿಭಾಗಾಧಿಕಾರಿ ಶಿವಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರು ಹಾಜರಿದ್ದರು.