Advertisement

ಪೌರಕಾರ್ಮಿಕರಿಗೆ ಸೌಲಭ್ಯ ಒದಗಿಸಿ

11:47 AM Jan 27, 2023 | Team Udayavani |

ರಾಮನಗರ: ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅವಿನಾಶ್‌ ಮೆನನ್‌ ರಾಜೇಂದ್ರನ್‌ ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ಮಚಾರಿ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ, ಬಿಡದಿ ಹಾಗೂ ಹಾರೋಹಳ್ಳಿ ಈ ಭಾಗದಲ್ಲಿ ಜನಸಂಖ್ಯೆಗೆ ಆಧಾರವಾಗಿ ಪೌರಕಾರ್ಮಿಕರನ್ನು ಪೌರಾಡಳಿತ ನಿರ್ದೇಶನಾಲಯದಿಂದ ಅನುಮತಿ ಪಡೆದು ನೇಮಕಾತಿ ಮಾಡುವಂತೆ ತಿಳಿಸಿದ ಅವರು, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ಸಾಲ ಸೌಲಭ್ಯ ನೀಡಲು ವಿಳಂಬ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಕೂಡಲೇ ಸಾಲ ಸೌಲಭ್ಯವನ್ನು ಫಲಾನುಭವಿಗಳ ಖಾತೆಗೆ ಆರ್‌ಟಿಜಿಎಸ್‌ ಮೂಲಕ ಪಾವತಿಸುವಂತೆ ತಿಳಿಸಿದರು.

ನಿವೇಶನ ನೀಡುವಂತೆ ಒತ್ತಾಯ: ಸಮಿತಿ ಸದಸ್ಯರಾದ ಆರ್‌. ನಾಗರಾಜು ಮಾತನಾಡಿ, ಪೌರಕಾರ್ಮಿಕರಿಗೆ 30/40 ಅಳತೆ ನಿವೇಶನ ನೀಡುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ನಗರಸಭೆಗಳಲ್ಲಿ ಪೌರಕಾರ್ಮಿಕರಿಗೆ ಮನೆ ನಿರ್ಮಿಸಿ ಕೊಡಲು ಸೂಕ್ತ ಸ್ಥಳ ಗುರುತಿಸಿ ನಿವೇಶನ ನೀಡುವುದಾಗಿ ತಿಳಿಸಿದರು.

ಸೂಕ್ತ ಕ್ರಮ ಕೈಗೊಳ್ಳಿ: ಸದಸ್ಯ ಶಿವಕುಮಾರಸ್ವಾಮಿ ಮಾತನಾಡಿ, ಪ್ರತಿಷ್ಠಿತ ಶಾಲೆಗಳಲ್ಲಿ ಪೌರಕಾರ್ಮಿಕರ ಮಕ್ಕಳನ್ನು ದಾಖಲು ಮಾಡಲು ಅವಕಾಶ ನೀಡುತ್ತಿಲ್ಲ. ಪೌರಕಾರ್ಮಿಕರ ನೇಮಕಾತಿ ವಿಚಾರವಾಗಿ ಕೆಲವು ಮಧ್ಯವರ್ತಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು, ಶಾಲೆಗಳಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ಪ್ರವೇಶ ಹಾಗೂ ಪಾರದರ್ಶಕವಾಗಿ ಪೌರಕಾರ್ಮಿಕರ ನೇಮಕಾತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ನೌಕರರಿಗೆ ಕನಿಷ್ಠ ವೇತನ ನೀಡಬೇಕು: ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರಿಗೆ ಬೆಳಗಿನ ಉಪಾಹಾರ, ಮೊಟ್ಟೆ, ಹಾಲು ಹಾಗೂ ಗುಣಮಟ್ಟದ ಪದಾರ್ಥಗಳನ್ನು ನೀಡಬೇಕು. ಶೀಘ್ರದಲ್ಲೇ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಯೋಜನೆಯನ್ನು ಜಾರಿ ಮಾಡಲಾಗುವುದು. ಸಾರಿಗೆ ಸಂಸ್ಥೆಯಲ್ಲಿ, ಸರ್ಕಾರಿ ಆಸ್ಪತ್ರೆ, ಎಪಿಎಂಸಿಗಳಲ್ಲಿ ಕಾರ್ಯನಿರ್ವಹಿ ಸುತ್ತಿರುವ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಎಂದರು.

Advertisement

ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಯೋಜನಾ ನಿರ್ದೇಶಕ ರಮೇಶ್‌, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೇಶ್‌ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next