Advertisement

ಎಸ್ಸಿ, ಎಸ್ಟಿ ಫ‌ಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಿ

05:34 PM Mar 31, 2022 | Team Udayavani |

ದೇವನಹಳ್ಳಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸರ್ಕಾರ ಜಾರಿಗೆ ತಂದಿರುವ ಸೌಲಭ್ಯಗಳನ್ನು ತಲುಪಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಶೀಘ್ರ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ತಿಳಿಸಿದರು.

Advertisement

ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ 1ನೇ ತ್ರೆçಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದ 24 ಗಂಟೆಗಳಲ್ಲಿ ಪ್ರಕರಣ ದಾಖಲು ಮಾಡುವುದೊಂದಿಗೆ, ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಒದಗಿಸುವ ಮೂಲಕ ಶೀಘ್ರ ಇತ್ಯರ್ಥಗೊಳಿಸಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವೊಂದು ಗ್ರಾಮಗಳನ್ನು ಹೊರತುಪಡಿಸಿ ಎಲ್ಲಾ ಗ್ರಾಮಗಳಿಗೆ ಸ್ಮಶಾನಕ್ಕಾಗಿ ಭೂಮಿ ಮಂಜೂರು ಮಾಡಲಾಗಿದೆ. ಇನ್ನುಳಿದ ಗ್ರಾಮಗಳಿಗೂ ಶೀಘ್ರವಾಗಿ ಸ್ಮಶಾನ ಭೂಮಿ ಮಂಜೂರು ಮಾಡಲಾಗುವುದು ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಘಟನೆಗಳ ಹೋರಾಟಗಾರರನ್ನು ರೌಡಿಶೀಟರ್‌ ಪಟ್ಟಿಗೆ ಸೇರಿಸಲಾಗಿದ್ದು, ಸನ್ನಡತೆ ಆಧಾರದಲ್ಲಿರುವವರ ಹೆಸರು ಗಳನ್ನು ಪುನರ್‌ ಪರಿಶೀಲನೆ ನಡೆಸಿ ರೌಡಿಶೀಟರ್‌ ಪಟ್ಟಿಯಿಂದ ಕೈಬಿಡಬೇಕೆಂದು ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಒತ್ತಾಯಿಸಿದಾಗ, ಈ ಕುರಿತು ಪರಿಶೀಲಿಸಿ ಶೀಘ್ರ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಯವರು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ಜಮೀನುಗಳಿಗೆ ರಸ್ತೆ ಹಾಗೂ ಕಾಲೋನಿಗಳ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸಬೇಕು. ಮನೆಗಳನ್ನು ಕಳೆದುಕೊಂಡಿರು ವವರಿಗೆ ವಿವಿಧ ವಸತಿ ಯೋಜನೆಗಳಡಿ ಮನೆ ಅಥವಾ ಹಕ್ಕುಪತ್ರ ವಿತರಣೆಗೆ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪು ಮೋಟಾರ್‌ ಹಾಗೂ ಇತರೆ ಸಾಮಗ್ರಿಗಳನ್ನು ಸ್ಥಳೀಯ ಶಾಸಕರಿಂದ ವಿತರಿಸಲು ಕ್ರಮವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗೆ ನಿರ್ದೇಶಿಸಿದರು.

Advertisement

ವಿವಿಧ ಯೋಜನೆಗಳಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ನೀಡಲಾಗುವ ಸಾಲ, ಸಹಾಯಧನಕ್ಕೆ ಸಂಬಂಧಿಸಿದ ಅರ್ಜಿಗಳು ಬ್ಯಾಂಕುಗಳಲ್ಲಿ ವಿಲೇವಾರಿ ಯಾಗದೇ ಉಳಿದಿದ್ದು, ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಮ್ಯಾನ್ಯುಯಲ್‌ ಸ್ಕ್ಯಾವೆಂಜ ರ್ಸ್‌ಗಳ ಸಮೀಕ್ಷೆ ನಡೆಸಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ ಮಾತನಾಡಿ, 2021ರ ಡಿಸೆಂಬರ್‌ ಮಾಹೆಯಿಂದ ಪ್ರಸಕ್ತ ಮಾಹೆಯವರೆಗೆ ಪೊಲೀಸ್‌ ಇಲಾಖೆಯಿಂದ ನೀಡಲಾಗಿರುವ 51 ಜನ ಸಂತ್ರಸ್ತರಿಗೆ 70.98 ಲಕ್ಷ ರೂ. ಪರಿಹಾರ ಧನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next