ಧಾರವಾಡ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್ ನೀಡುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್‌ಒ) ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆನಡೆಸಲಾಯಿತು.
ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನೆ ನಡೆಸಿ, ಸರ್ಕಾರದ ಉಚಿತ ಲ್ಯಾಪ್‌ಟಾಪ್ ನೀಡುವ ಯೋಜನೆಯನ್ನು ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿಸ್ತರಿಸಿ ಅವರಿಗೂ ಪ್ರಯೋಜನ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಎಐಡಿವೈಒ ಜಿಲ್ಲಾಧ್ಯಕ್ಷ ಭವಾನಿಶಂಕರ ಎಸ್.ಗೌಡ ಮಾತನಾಡಿ, ಕೇವಲ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡಿ, ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನೀಡದಿದ್ದರೆ ತಾರತಮ್ಯ ಮಾಡಿದಂತೆ ಆಗುತ್ತದೆ. ಮುಖ್ಯವಾಗಿ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತಮ್ಮ ಪ್ರಾಜೆಕ್ಟ್ ವಕ್ ಗಳಿಗೆ ಲ್ಯಾಪ್‌ಟಾಪ್ ಅವಶ್ಯಕತೆ ಇರುತ್ತದೆ. ಇದಲ್ಲದೇ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಿಕೊಂಡು ಇನ್ನು ಕೇವಲ 2-3 ತಿಂಗಳಲ್ಲಿ ಹೊರ ಹೋಗುತ್ತಾರೆ. ಅವರಿಗೆ ಉಚಿತ ಲ್ಯಾಪ್‌ಟಾಪ್ ನೀಡುವುದರಿಂದ ಅವರು ತಮ್ಮ ಉನ್ನತ ವ್ಯಾಸಂಗ ನಡೆಸಲು ಅನುಕೂಲವಾಗುತ್ತದೆ ಎಂದರು.
ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಮಹಾಂತೇಶ ಬಿಳೂರು, ಎಐಡಿವೈಒ ಜಿಲ್ಲಾ ಉಪಾಧ್ಯಕ್ಷ ಹನುಮೇಶ ಹುಡೇದ, ಎಐಡಿಎಸ್‌ಒ ಜಿಲ್ಲಾಕಾರ್ಯದರ್ಶಿ ರಣಜಿತ ದೂಪದ್, ಶರಣು ಬಸವ ಪಾಟೀಲ, ಸಿಂಧೂ ಕೌದಿ, ಅರುಣ, ವಿದ್ಯಾರ್ಥಿಗಳಾದ ದೇವರಾಜ, ಮಲ್ಲೇಶ, ಮೃತ್ಯುಂಜಯ ಇದ್ದರು.