ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಲ್ಲಿ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ಅಗತ್ಯ ಕಾನೂನಿನ ನೆರವು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಶಿಷ್ಟರ ಮೇಲಿನ ದೌರ್ಜನ್ಯಗಳ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಯಾವುದೇ ವಿಳಂಬ ಧೋರಣೆ ಬೇಡ. ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕೆ ಹಾಗೂ ಬಾಕಿ ಉಳಿದಿರುವ ಪ್ರಕರಣಗಳ ವಿರುದ್ಧ ಕ್ರಮ ವಹಿಸಲು ಹೆಚ್ಚು ಒತ್ತು ನೀಡಬೇಕು. ಪರಿಶಿಷ್ಟರ ಮೇಲೆ ಅಮಾನವೀಯ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯಲ್ಲಿ ನಡೆದಿರುವ ವಿಷ ಪ್ರಾಶನ ಪ್ರಕರಣವು ತುಂಬಾ ಗಂಭೀರ ಪ್ರಕರಣವಾಗಿದ್ದು, ಸಂತ್ರಸ್ತ ಕುಟುಂಬದವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ಇಲಾಖೆ ವತಿಯಿಂದ ಶಿಬಿರಗಳನ್ನು ಆಯೋಜಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು. ಸಂತ್ರಸ್ತರ ಆರೋಗ್ಯ ತಪಾಸಣೆಯನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು.
ಸೂಕ್ತ ದಾಖಲೆಗಳನ್ನು ಒದಗಿಸಿ: ಕೊಳ್ಳೇಗಾಲ ತಾಲೂಕು ನರೀಪುರ ಗ್ರಾಮದಲ್ಲಿ ಪರಿಶಿಷ್ಟರಿಗೆ ನಿವೇಶನ ನೀಡಿದ್ದು, ಸೂಕ್ತ ದಾಖಲೆಗಳನ್ನು ತಾಲೂಕು ತಹಶೀಲ್ದಾರ್ ಅವರು ಒದಗಿಸಬೇಕು. ಸುಳ್ವಾಡಿ ಪ್ರಕರಣದಲ್ಲಿ ನೊಂದ ಕುಂಟುಂಬಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಯಡಿ ಸಂತ್ರಸ್ತ ಕುಟುಂಬಕ್ಕೆ 2 ಎಕರೆ ಜಮೀನು ನೀಡಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ ನೀಡಿದರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಸದಸ್ಯ ಕೆಂಪನಪಾಳ್ಯ ಸಿದ್ದರಾಜು, ಆಸಿಫ್ ಉಲ್ಲಾ, ಗುಂಡ್ಲುಪೇಟೆ ಸಿದ್ದರಾಜು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ. ಉದೇಶ್, ಉಪವಿಭಾಗಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.