ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ, ಅಮಾನತಾದ ಎಡಿಜಿಪಿ ಅಮೃತ್ ಪೌಲ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಸಿಐಡಿ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಪೌಲ್ ಅವರನ್ನು ಶುಕ್ರವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಪೌಲ್‌ಗೆ ಸುಳ್ಳುಪತ್ತೆ ಪರೀಕ್ಷೆ ಹಾಗೂ ಮಂಪರು ಪರೀಕ್ಷೆ ನಡೆಸಲು ಅನುಮತಿ ನೀಡುವಂತೆ ಸಿಐಡಿ ಪರ ವಕೀಲರು ಮನವಿ ಮಾಡಿದ್ದರು. ಆದರೆ ಪೌಲ್ ವೈದ್ಯಕೀಯ ಚಿಕಿತ್ಸೆಯಲ್ಲಿ ಇರುವುದರಿಂದ ಮಂಪರು ಪರೀಕ್ಷೆ ಸದ್ಯಕ್ಕೆ ಬೇಡ ಎಂದು ಕೋರ್ಟ್ ಹೇಳಿದೆ.
ನ್ಯಾಯಾಲಯದ ಸೂಚನೆಯಂತೆ ಪೌಲ್‌ಗೆ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಲಾಯಿತು. ಜೈಲಿನಲ್ಲಿ ಪ್ರತಿದಿನ ಅರ್ಧ ಗಂಟೆ ಕುಟುಂಬದವರ ಭೇಟಿಗೆ ಅವಕಾಶ ನೀಡಲಾಗಿದೆ. ಜತೆಗೆ, ವೈದ್ಯಕೀಯ ನೆರವು ನೀಡುವಂತೆ ಜೈಲಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.
10 ಲಕ್ಷ ರೂ.ಯಿದ್ದ ಪೌಲ್ ಅವರ 4 ಬ್ಯಾಂಕ್ ಖಾತೆಗಳನ್ನು ಸಿಐಡಿ ತಟಸ್ಥಗೊಳಿಸಿರುವ ಮಾಹಿತಿಯನ್ನು ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದರು.
ಆಕ್ಷೇಪಣೆ ಸಲ್ಲಿಸಲು ಸೂಚನೆ
ಪೌಲ್ ಜಾಮೀನು ಅರ್ಜಿ ವಿಚಾರಣೆಯೂ ಶುಕ್ರವಾರ ನ್ಯಾಯಾಲಯದಲ್ಲಿ ನಡೆದಿದ್ದು, ಅದಕ್ಕೆ ಶನಿವಾರ ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ಸೂಚಿಸಲಾಗಿದೆ.