ಬೆಂಗಳೂರು: 545 ಪಿಎಸ್ ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪದಡಿ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಅಮೃತ್ ಪೌಲ್ ಅವರು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಸಮಯದಲ್ಲಿ ಪಿಎಸ್ಐ ಅಕ್ರಮ ನಡೆದಿತ್ತು. ಅಕ್ರಮ ಹಗರಣದಲ್ಲಿ ಅಮೃತ್ ಪೌಲ್ ಹೆಸರು ಕೂಡಾ ಕೇಳಿಬಂದಿತ್ತು. ಈ ಬಗ್ಗೆ ಅವರು ಸಿಐಡಿ ತನಿಖೆಗೂ ಹಾಜರಾಗಿದ್ದರು. ಇಂದು ನಾಲ್ಕನೇ ಬಾರಿಗೆ ಅವರು ತನಿಖೆಗೆ ಹಾರಜರಾದ ಸಮಯದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಗ್ಗೆ ಖಾಸಗಿ ಸುದ್ದಿವಾಹಿನಿಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪಿಎಸ್ ಐ ಅಕ್ರಮ ಪ್ರಕರಣದಲ್ಲಿ ಅಮೃತ್ ಪೌಲ್ ಬಂಧನವಾಗಿದೆ. ಅವರ ವಿರುದ್ದ ಸಾಕ್ಷ್ಯಾಧಾರ ಸಿಕ್ಕಿದ್ದರಿಂದ ಅವರನ್ನು ಬಂಧಿಸಲಾಗಿದೆ. ಅವರು ನೇಮಕಾತಿ ವಿಭಾಗದ ಸುಪ್ರೀಂ ಆಗಿದ್ದರು. ಅವರ ಕಚೇರಿಯಲ್ಲೇ ಒಎಂಆರ್ ಶೀಟ್ ತಿದ್ದಲಾಗಿತ್ತು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿದರು.
ಪೌಲ್ ಪಾತ್ರವೇನು?: ಅಮೃತ್ ಪೌಲ್ ಈ ಹಿಂದೆ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದರು. ಇವರ ನೇತೃತ್ವದಲ್ಲಿ 2021ರ ಅಕ್ಟೋಬರ್‌ನಲ್ಲಿ 92 ಕೇಂದ್ರಗಳಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿತ್ತು. 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡ ಬಳಿಕ ಪರೀಕ್ಷೆಯಲ್ಲಿ ಅಕ್ರಮದ ಆರೋಪಗಳು ಕೇಳಿ ಬಂದಿದ್ದವು. ಇದಕ್ಕೆ ಪೂರಕವಾಗಿ ಕೆಲ ಸಾಕ್ಷ್ಯಗಳು ಲಭ್ಯವಾಗಿದ್ದವು. ಹೀಗಾಗಿ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿತ್ತು. ಸಿಐಡಿ ತನಿಖೆ ವೇಳೆ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಗಳು, ಏಜೆಂಟರು, ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು ಸಿಕ್ಕಿಬಿದ್ದಿದ್ದರು. ನೇಮಕಾತಿ ವಿಭಾಗದ ಅಧಿಕಾರಿಗಳು ಅಕ್ರಮದಲ್ಲಿ ಕೈಜೋಡಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆ ವಿಭಾಗದ ಹಿಂದಿನ ಮುಖ್ಯಸ್ಥರಾದ ಅಮೃತ್ ಪೌಲ್ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಲಾಗಿತ್ತು.